ರಾಜ್ಯ

ತೆರಿಗೆ ಸೋರಿಕೆ ತಡೆಗಟ್ಟಲು ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಯಡಿಯೂರಪ್ಪ

Nagaraja AB

ಬೆಂಗಳೂರು: ರಾಜ್ಯದಲ್ಲಿ ಈಗ ಮತ್ತೆ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು, ಆರ್ಥಿಕ ಪರಿಸ್ಥಿತಿ ಸುಧಾರಣೆಗಾಗಿ ತೆರಿಗೆ ಸೋರಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಸೋರಿಕೆ ತಡೆಗಟ್ಟಿದರೆ ಆರ್ಥಿಕ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದರು

ನಕಲಿ ಇ-ವೇ ಬಿಲ್ ಗಳ ಬಳಕೆ, ಸರಕು ಸಾಗಾಣಿಕೆಗೆ ನೀಡುವ ಸಮಯಾವಕಾಶದ ದುರ್ಬಳಕೆ ಮುಂತಾದ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದರು.ಕೋವಿಡ್ 19ರ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆಯಿಂದಾಗಿ ಸಹಜವಾಗಿ ತೆರಿಗೆ ಸಂಗ್ರಹ ಕುಂಠಿತವಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಸರಿದೂಗಿಸಲು ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು

ಆರ್ಥಿಕ ಚಟುವಟಿಕೆಗಳು ಇದೀಗ ಮತ್ತೆ ಪ್ರಾರಂಭವಾಗುತ್ತಿದ್ದು, ವ್ಯಾಪಾರಿಗಳಿಗೆ ಕಿರುಕುಳ ನೀಡಬಾರದು. ವ್ಯಾಪಾರ ವಹಿವಾಟು ಸುಗಮವಾಗಿ ನಡೆಯುವಂತೆ ವ್ಯವಸ್ಥೆ ಮಾಡಬೇಕು ಎಂದರು. 

ಹೊಸ ಆರ್ಥಿಕ ವರ್ಷ ಆರಂಭವಾಗಿದ್ದು, ಈ ವರ್ಷದ ತೆರಿಗೆ ಸಂಗ್ರಹದ ಗುರಿ, ಜಿ.ಎಸ್.ಟಿ ಪಾಲು ಮತ್ತಿತರ ವಿಚಾರಗಳ ಕುರಿತು ಅಧಿಕಾರಿಗಳಿಂದ ಯಡಿಯೂರಪ್ಪ ಮಾಹಿತಿ ಪಡೆದರು. 

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್ ಎನ್ ಪ್ರಸಾದ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ.ಎಸ್. ಶ್ರೀಕರ್ ಮೊದಲಾದವರು ಉಪಸ್ಥಿತರಿದ್ದರು.

SCROLL FOR NEXT