ರಾಜ್ಯ

ಕಸ್ತೂರಿ ರಂಗನ್ ವರದಿ ಬಗ್ಗೆ ಗ್ರಾಮಪಂಚಾಯಿತಿ ಸದಸ್ಯರಿಗೆ ಅನುಮಾನಗಳಿವೆ: ಯಡಿಯೂರಪ್ಪ

Shilpa D

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್  ಜಾವಡೇಕರ್ ಜೊತೆ ಗುರುವಾರ ಮಾತುಕತೆ ನಡೆಸಿದರು.

ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ ಸಿಎಂ ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ಪ್ರದೇಶವೆಂದು ಘೋಷಿಸುವ ಕುರಿತು ಚರ್ಚೆ ನಡೆಸಿದರು. ಈ ಸಂಬಂಧ ರಾಜ್ಯದ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, 'ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳು, ತಾಲೂಕು ಪಂಚಾಯಿತಿಗಳು, ಜಿಲ್ಲಾ ಪಂಚಾಯಿತಿಗಳು, ವಿವಿಧ ಹಂತಗಳ ಜನಪ್ರತಿನಿಧಿಗಳು ಹಾಗೂ ಸಚಿವ ಸಂಪುಟವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಯನ್ನು ಈಗಿರುವ ಸ್ವರೂಪದಲ್ಲಿ ತಿರಸ್ಕರಿಸಿವೆ. ಅದರಲ್ಲೂ ಸೂಕ್ಷ್ಮ ಪರಿಸರ ಪ್ರದೇಶ
ಎಂದು ಘೋಷಿಸಿದ್ದನ್ನು ತಿರಸ್ಕರಿಸಿದ್ದಾರೆ,' ಎಂದು ತಿಳಿಸಿದರು.

ಪ್ರತಿ ರಾಜ್ಯದ ಸಮಸ್ಯೆಗಳು, ಸವಾಲುಗಳು ಭಿನ್ನವಾಗಿರುವುದರಿಂದ ಭಾರತ ಸರಕಾರವು ಎಲ್ಲ ರಾಜ್ಯಗಳಿಗೆ ಏಕ ರೂಪದ ಅಧಿಸೂಚನೆ ಹೊರಡಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಇದಕ್ಕೆ ಸಹಮತ ವ್ಯಕ್ತ ಪಡಿಸಿ, ಪ್ರತಿ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರತ್ಯೇಕವಾಗಿ ಚರ್ಚಿಸುವುದಾಗಿ ತಿಳಿಸಿದರು..

ರಾಜ್ಯದ ಅರಣ್ಯ ಸಚಿವ ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅರಣ್ಯ ಇಲಾಖೆ ಅಪರಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮಹಾರಾಷ್ಟ್ರ, ಕೇರಳ, ಗೋವಾ, ತಮಿಳುನಾಡು ಮತ್ತು ಗುಜರಾತ್ ರಾಜ್ಯದ ಮುಖ್ಯಮಂತ್ರಿಗಳು/ ಸಚಿವರು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

SCROLL FOR NEXT