ರಾಜ್ಯ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಜಗಿದು ಉಗಿಯುವುದು ನಿಷೇಧ: ಆರೋಗ್ಯ ಇಲಾಖೆ ಆದೇಶ

Raghavendra Adiga

ಬೆಂಗಳೂರು:  ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳು ಹಾಗೂ ಪಾನ್‌ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಐಸಿಎಂಆರ್‌ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಕೋವಿಡ್ -19 ಹೆಚ್ಚುತ್ತಿದೆ ಎಂಬ ಕುರಿತು ಆತಂಕ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ತಂಬಾಕು ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ.

ನಿಯಮ ಉಲ್ಲಂಘಿಸಿದಲ್ಲಿ, ಐಪಿಸಿ ಸೆಕ್ಷನ್‌ 188 (ಸಾರ್ವಜನಿಕ ಅಧಿಕಾರಿಯ ಆದೇಶ ಉಲ್ಲಂಘನೆ), 268, 269, 279 (ಜೀವಕ್ಕೆ ಅಪಾಯಕಾರಿಯಾದ ರೋಗವನ್ನು ನಿರ್ಲಕ್ಷ್ಯದಿಂದ ಹರಡುವುದು) ಅಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ಎಚ್ಚರಿಕೆ ನೀಡಿದೆ.

ಈ ಹಿಂದೆ ಎಲ್ಲ ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ ಸರ್ಕಾರ, ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಉಗಿಯುವುದನ್ನು ನಿಷೇಧಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿತ್ತು. ಈಗಾಗಲೇ ಬಿಹಾರ, ಜಾರ್ಖಂಡ್‌ ರಾಜ್ಯಗಳಲ್ಲಿ ಎಲ್ಲ ರೀತಿಯ ಜಗಿಯುವ ತಂಬಾಕು, ಪಾನ್‌ ಮಸಾಲ ಉತ್ಪನ್ನಗಳನ್ನು ನಿಷೇಧಿಸಲಾಗಿದೆ.

SCROLL FOR NEXT