ರಾಜ್ಯ

ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ: 10ಕ್ಕೂ ಹೆಚ್ಚು ಜನರ ಬಂಧನ

Raghavendra Adiga

ಕಲಬುರಗಿ: ರಾಜ್ಯದಲ್ಲಿ ಯಾವುದೇ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಕಲ್ಯಾಣ ಕರ್ನಾಟಕ ಭಾಗವನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಬಹಿಷ್ಕರಿಸಿ, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯಿಂದ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಲಾಯಿತು. ಈ ವೇಳೆ ಹತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗಕ್ಕೆ ರಾಜ್ಯ ಸರ್ಕಾರದಿಂದ ಮಲತಾಯಿ ಧೋರಣೆ ಮುಂದುವರಿಸಲಾಗುತ್ತಿದೆ. ಸಚಿವ ಸ್ಥಾನದಿಂದಲೂ ಈ ಭಾಗವನ್ನು ವಂಚಿಸಲಾಗಿದೆ. ಸಂವಿಧಾನದ ಕಲಂ 371ಕ್ಕೆ ತಿದ್ದುಪಡಿ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಅನ್ಯಾಯದ ಮೇಲೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೂ ಸ್ಪರ್ಧಿಸುವುದಾಗಿ  ಎಂ.ಎಸ್. ಪಾಟೀಲ್ ಹೇಳಿದ್ದಾರೆ.

SCROLL FOR NEXT