ರಾಜ್ಯ

3 ವಾರದೊಳಗೆ ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಪ್ರಕಟಿಸಿ: ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶ

Lingaraj Badiger

ಬೆಂಗಳೂರು: ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಮೂರು ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶುಕ್ರವಾರ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿಗಳಿಗೆ ಶೀಘ್ರ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಕೆ.ಸಿ. ಕೊಂಡಯ್ಯ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ‌ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಚುನಾವಣಾ ಆಯೋಗ ಗ್ರಾಮ ಪಂಚಾಯಿತಿಗಳ ಅವಧಿ ಮುಗಿಯುವ ಮೊದಲು ಚುನಾವಣೆ ನಡೆಸುವ ಸಾಂವಿಧಾನಿಕ ಆದೇಶವನ್ನು ಪಾಲಿಸುವ ಸ್ವತಂತ್ರ ಸಂಸ್ಥೆಯಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರವು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಸಿಬ್ಬಂದಿಯ ಅಗತ್ಯವಿದ್ದರೆ ಚುನಾವಣಾ ಆಯೋಗ ರಾಜ್ಯಪಾಲರನ್ನು ಸಂಪರ್ಕಿಸಬಹುದು. ಆದರೆ ರಾಜ್ಯ ಸರ್ಕಾರವನ್ನಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದೂಡಬೇಕು ಎಂದು ರಾಜ್ಯ ಸರ್ಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ ಆಯೋಗ ತನ್ನ ವೇಳಾಪಟ್ಟಿಯ ಪ್ರಕಾರ, ಕೋವಿಡ್ ಮಾರ್ಗಸೂಚಿಗಳೊಂದಿಗೆ ಚುನಾವಣೆ ನಡೆಸುವ ನಿರ್ಧಾರ ತೆಗೆದುಕೊಂಡಿದೆ.

SCROLL FOR NEXT