ರಾಜ್ಯ

ಹೊಸ ವರ್ಷದ ಪಾರ್ಟಿ ನಿಷೇಧ ಕುರಿತು ಶೀಘ್ರದಲ್ಲೇ ತೀರ್ಮಾನ: ಬೊಮ್ಮಾಯಿ

Manjula VN

ಬೆಂಗಳೂರು: ಹೊಸವರ್ಷಾಚರಣೆ ಪಾರ್ಟಿಗಳಿಗೆ ಅನುಮತಿ ನೀಡಬೇಕೇ ಅಥವಾ ನಿಷೇಧ ಹೇರಬೇಕೇ ಎಂಬ ಬಗ್ಗೆ ಶೀಘ್ರದಲ್ಲಿಯೇ ತೀರ್ಮಾನಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 

ಪರಿಸರಕ್ಕೆ ಮತ್ತು ಆರೋಗ್ಯಕ್ಕೆ ಹಾನಿಯಾಗುವ ಪಟಾಕಿಗಳನ್ನು ಬಳಸದೆ ಹಸಿರು ಪಟಾಕಿಗಳನ್ನು ಮಾತ್ರ ದೀಪಾವಳಿಗೆ ಬಳಸುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಜನಜಾಗೃತಿ ಮೂಡಿಸಲು ಜಾಥಾ ನಡೆಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಹಾಗೂ ಅಗ್ನಿ ಅವಘಡಗಳನ್ನು ತಡೆಯುವ ನಿಟ್ಟಿನಲ್ಲಿ ಜನರಿಗೆ ಜಾಗೃತಿ ಮೂಡಿಸಲು ಅಗ್ನಿ ಶಾಮಕ ಇಲಾಖೆಯ ಜಾಗೃತಿ ಜಾಥಾಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದರು.

ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾಗೃತಿ ಜಾಥಾ ಗೆ ಹಸಿರು ನಿಶಾನೆ ತೋರಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಹಿನ್ನೆಲೆಯಲ್ಲಿ ವರ್ಷಾಚರಣೆ ಅಗತ್ಯವೇ ಎಂಬ ಪ್ರಶ್ನೆಯಾಗಿದೆ. ಸಂಭ್ರಮಾಚರಣೆಗೆ ನಿರ್ಬಂಧ ಹೇರುವ ಯಾವುದೇ ತೀರ್ಮಾನಕ್ಕೆ ಸರ್ಕಾರ ಇದೂವರೆಗೆ ಬಂದಿಲ್ಲ. ಈ ಕುರಿತು ಮುಖ್ಯಮಂತ್ರಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. 

SCROLL FOR NEXT