ಬೆಂಗಳೂರು: ರಾಜ್ಯದೆಲ್ಲೆಡೆ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಕೂಗುಗಳು ಕೇಳಿ ಬರುತ್ತಿರುವ ನಡುವಲ್ಲೇ, ಗೋಹತ್ಯೆ ನಿಷೇಧ ಮಾಡಲು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಬಿಜೆಪಿ ಶುಕ್ರವಾರ ಹೇಳಿದೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ. ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ಸರ್ಕಾರಕ್ಕೆ ಈ ಕುರಿತು ಸಲಹೆ ನೀಡಿದ್ದಾರೆ. ಇದರ ಬಗ್ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರೂ ಕೂಡ ಸಚಿವ ಪ್ರಭು ಚೌಹಾಣ್ ಜೊತೆಗೆ ಚರ್ಚೆ ನಡೆಸಿದ್ದಾರೆಂದು ತಿಳಿಸಿದೆ.
ಮತ್ತೊಂದು ಟ್ವೀಟ್ ನಲ್ಲಿ ಗೋ ಹತ್ಯೆ ನಿಷೇಧ ಜಾರಿಗೊಳಿಸಲು ಬಿಜೆಪಿ ಸರ್ಕಾರ ಈಗಾಗಲೇ ಸಮಿತಿ ರಚಿಸಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಮುಂದಿನ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಸರ್ಕಾರ ಮಸೂದೆ ಮಂಡಿಸಲಿದೆ. ರಾಜ್ಯದ ಜನತೆಯ ಅಪೇಕ್ಷೆ ಶೀಘ್ರದಲ್ಲೇ ನೆರವೇರಲಿದೆ ಎಂದು ಹೇಳಿದೆ.
ಸಿಟಿ ರವಿಯವರು ಟ್ವೀಟ್ ಮಾಡಿ, ಶೀಘ್ರದಲ್ಲೇ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾಗಲಿದೆ. ಮುಂದಿನ ಅಧಿವೇಶನದಲ್ಲಿ ಗೋವುಗಳ ಕಳ್ಳತನ, ಹತ್ಯೆ ನಿಷೇಧ ಕಾಯ್ದೆಗಳು ಜಾರಿಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಪ್ರಭು ಚೌಹಾಣ್ ಜೊತೆಗೂ ಮಾತುಕತೆ ನಡೆಸಲಾಗಿದೆ ಎಂದಿದ್ದಾರೆ.
Cow Slaughter Ban will be a reality in Karnataka in the near future.
In have asked Animal Husbandry Minister Sri @PrabhuChavanBJP to get "The Karnataka Prevention of Slaughter & Preservation of Cattle Bill" passed in the Cabinet and present the same in upcoming Assembly Session.
— C T Ravi