ರಾಜ್ಯ

ಡಿಸೆಂಬರ್ 1 ರೊಳಗೆ ಸ್ಮಾರ್ಟ್ ಆಗಲಿದೆ 'ಕಮರ್ಷಿಯಲ್ ಸ್ಟ್ರೀಟ್'

Manjula VN

ಬೆಂಗಳೂರು: ಕಮರ್ಷಿಯಲ್ ಸ್ಟ್ರೀಟ್ ರಸ್ತೆಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಕಾರ್ಯಗಳು ಮುಂದಿನ 10 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ನಿನ್ನೆಯಷ್ಟೇ ನಗರದ ವಿವಿಧ ರಸ್ತೆಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. 

ಈ ವೇಳೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿ ವೀಕ್ಷಣೆ ವೇಳೆ ಅವೈಜ್ಞಾನಿಕ ಮತ್ತು ವಿಳಂಬ ಕಾಮಗಾರಿ ಕಂಡು ಸಚಿವರು ಗರಂ ಆದರು. ಇನ್ಫೆಂಟ್ರಿ ರಸ್ತೆಯ ಎರಡೂ ಕಡೆಗಳಲ್ಲಿ ಏಕಕಾಲದಲ್ಲಿ ಅವೈಜ್ಞಾನಿಕವಾಗಿ ಕಾಮಗಾರಿ ಪ್ರಾರಂಭಿಸಲಾಗಿದೆ. ಇದು ವಾಹನ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿದೆ. ರಸ್ತೆಯಲ್ಲಿ ಪೊಲೀಸ್ ಕಮಿಷನರ್ ಕಚೇರಿ ಸೇರಿದಂತೆ ವಿವಿಧ ಪ್ರಮುಖ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಕಾಮಗಾರಿಯಿಂದ ವಾಹನ ದಟ್ಟಣೆಯುಂಟಾಗುತ್ತಿದ್ದು, ಕಚೇರಿ ಕೆಲಸಗಳಿಗೆ ತೊಂದರೆಯಾಗುತ್ತಿದೆ. ಶೀಘ್ರವೇ ಕಾಮಗಾರಿ ಪೂರ್ಣಗೊಳಿಸದಿದ್ದರೆ ಕಾಮಗಾರಿಯ ಬಿಲ್ ಪಾಸ್ ಮಾಡುವುದಿಲ್ಲ ಎಂದು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದರು. 

ಕಳೆದ 2-3 ತಿಂಗಳಿನಿಂದ ರೇಸ್ ಕೋರ್ಸ್ ರಸ್ತೆ, ರಾಜಭವನ ರಸ್ತೆ ಮತ್ತಿತರ ರಸ್ತೆಗಳ ಪಾದಚಾರಿ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದ್ದರೂ ಈವರೆಗೂ ಪೂರ್ಣಗೊಂಡಿಲ್ಲ. ಜೊತೆಗೆ ರಸ್ತೆಯಲ್ಲಿರುವ ಚೇಂಬರ್'ಗಳನ್ನು ಸರಿಯಾಗಿ ಅಳವಡಿಸದಿರುವುದನ್ನು ಕಂಡು ಸಚಿವರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ರಾಜಾರಾಂ ಮೋಹನ್ ರಾಯ್ ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಡಿಕನ್ಸನ್ ರಸ್ತೆ, ಹಲಸೂರು ರಸ್ತೆ, ಮಿಲ್ಲರ್ಸ್ ರಸ್ತೆ, ಕ್ವೀನ್ಸ್ ರಸ್ತೆ, ಲ್ಯಾವೆಲ್ಲಾ ರಸ್ತೆ ಮತ್ತಿತರ ಪ್ರದೇಶಗಳಿಗೂ ಸಚಿವರು ಭೇಟಿ ನೀಡಿ ಕಾಮಗಾರುಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. 

SCROLL FOR NEXT