ರಾಜ್ಯ

ಡಿಸೆಂಬರ್'ನಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ: ಕೋವಿಡ್-19 ತಾಂತ್ರಿಕಾ ಸಲಹಾ ಸಮಿತಿ ಶಿಫಾರಸು

Manjula VN

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೋವಿಡ್-19 ತಾಂತ್ರಿಕಾ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. 

ಸಮಿತಿಯ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ಅಧ್ಯಕ್ಷತೆಯಲ್ಲಿ ನಡೆದ ಸಲಹಾ ಸಮಿತಿ ಸಭೆಯಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಚರ್ಚೆಗಳು ನಡೆದಿದ್ದು, ಡಿಸೆಂಬರ್ ನಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರ ಸೂಚನೆ ಮೇರೆಗೆ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಆಸ್ಪತ್ರೆಗಳಲ್ಲೂ ಸೌಲಭ್ಯ ಹೆಚ್ಚಿಸಲಾಗಿದೆ. ಈಗ ಪ್ರತಿ ದಿನ ಸರಾಸರಿ 1,700ರಷ್ಟು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 8 ತಿಂಗಳುಗಳಲ್ಲಿ ಕೈಗೊಂಡ ನಾನಾ ಕ್ರಮಗಳ ಪರಿಣಾಮವಾಗಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಆದರೆ, ದೆಹಲಿ, ಹರಿಯಾಣ ಗುಜರಾತ್ ಮೊದಲಾದ ರಾಜ್ಯಗಳಲ್ಲಿ ಸೋಂಕು ಹರಡುವಿಕೆ ವೇಗ ಪಡೆದಿದೆ ಎಂದು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ. 

ಚಳಿಗಾಲ ಕೂಡ ಆರಂಭವಾಗಿರುವುದರಿಂದ ಕೊರೋನಾ ಸೋಂಕು ಹರಡುವಿಗೆ ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಗಳು ತೀವ್ರವಾಗಿ ಬಾಧಿಸುತ್ತವೆ. ಸೆಪ್ಟೆಂಬರ್ನಲ್ಲಿ ನಡೆದ ಸರ್ವೇ ಪ್ರಕಾರ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆಗಳಿವೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಡಿಸೆಂಬರ್ ನಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿ ಬಂದಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಅಭಿಪ್ರಾಯವನ್ನೇ ಸರ್ಕಾರವನ್ನೇ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. 

ಈ ನಡುವೆ ಡಿಸೆಂಬರ್ ಕೊನೆಯ ವಾರದಲ್ಲಿ ಕೊರೋನಾ ಪರಿಸ್ಥಿತಿ ನೋಡಿಕೊಂಡು ಶಾಲೆಗಳನ್ನು ತೆರೆಯಲು ಮತ್ತೆ ನಿರ್ಧಾರ ಕೈಗೊಳ್ಳಬಹುದುಎಂದು ಸಭೆಯಲ್ಲಿ ಅಭಿಪ್ರಾಯಪಡಯಲಾಗಿದೆ. 

SCROLL FOR NEXT