ರಾಜ್ಯ

ಒಂದು ಸಾವಿರ ಜನಕ್ಕೆ ಸೀಮಿತವಾಗಿ ಪಂಚಲಿಂಗ ದರ್ಶನ: ಸಿಎಂ ಯಡಿಯೂರಪ್ಪ

Lingaraj Badiger

ಮೈಸೂರು: ಒಂದು ಸಾವಿರ ಜನಕ್ಕೆ ಸೀಮಿತಗೊಳಿಸಿ, ಸರಳವಾಗಿ ಪಂಚಲಿಂಗ ದರ್ಶನ ಮಹೋತ್ಸವ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬುಧವಾರ ತಿ.ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆದ ಪಂಚಲಿಂಗ ದರ್ಶನ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಈ ವೇಳೆ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಪಂಚಲಿಂಗ ದರ್ಶನದ ಹಿನ್ನೆಲೆ ಅಗತ್ಯವಿರುವ ಕೆಲಸಗಳನ್ನು ಈಗ ತುರ್ತಾಗಿ ಕೈಗೊಳ್ಳಬೇಕು. ತಲಕಾಡು ಅಭಿವೃದ್ಧಿಗೆ ಬೇಕಾಗುವ ಶಾಶ್ವತ ಕೆಲಸಗಳನ್ನು ನಂತರ ಕೈಗೆತ್ತುಕೊಳ್ಳಿ ಎಂದು ಸಲಹೆ ನೀಡಿದರು.

ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರು ಮಾತನಾಡಿ, ರಸ್ತೆ ಗುಂಡಿ ಮುಚ್ಚುವ ಕೆಲಸ ನಾಳೆಯಿಂದಲೇ ಕೈಗೊಳ್ಳಲಾಗುತ್ತದೆ. ಈ ಕೆಲಸವನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿಸಿದರು.

ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌.ಟಿ.ಸೋಮಶೇಖರ್ ಅವರು ಮಾತನಾಡಿ, ಪಂಚಲಿಂಗ ದರ್ಶನ ಮಹೋತ್ಸವಕ್ಕೆ 2.2 ಕೋಟಿ ರೂ. ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿದೆ. ಈ ವೆಚ್ಚವನ್ನು ಮರುಪರಿಶೀಲಿಸಿ ಸಲ್ಲಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು.

ಮುಜರಾಯಿ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎಸ್.ಎ.ರಾಮದಾಸ್, ಎಂ.ಅಶ್ವಿ ನ್ ಕುಮಾರ್ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

SCROLL FOR NEXT