ಬೆಂಗಳೂರು: ಕಾರೊಂದು ರಸ್ತೆಯ ಪಕ್ಕದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಗರದ ಮಲ್ಲೇಶ್ವರಂ ಮುಖ್ಯರಸ್ತೆಯಲ್ಲಿ ನಡೆದಿದೆ.
ಅಪಘಾತದಲ್ಲಿ ವಿಜಯನಗರ ನಿವಾಸಿ ರಜತ್ (27) ಮೃತಪಟ್ಟ ಯುವಕ. ಮಧ್ಯರಾತ್ರಿ 1.30ರ ಸುಮಾರಿಗೆ ಕಾರಿನಲ್ಲಿ ಮಲ್ಲೇಶ್ವರಂ ರಸ್ತೆ ಮಾರ್ಗವಾಗಿ ರಜತ್ ತೆರಳುತ್ತಿದ್ದ. ಆದರೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಆಗ ಗಂಭೀರವಾಗಿ ಗಾಯಗೊಂಡಿದ್ದ ರಜತ್ನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವಾಗ, ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಮೃತದೇಹವನ್ನು ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಸ್ಥಳಕ್ಕೆ ಮಲ್ಲೇಶ್ವರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅತಿವೇಗವೇ ಈ ಘಟನೆ ಕಾರಣವಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.