ಕೊರೋನಾ ಸಾಂಕ್ರಾಮಿಕ ನಡುವಲ್ಲೂ ಸುರಕ್ಷತಾ ಕ್ರಮಗಳೊಂದಿಗೆ ಏರ್ ಶೋ ನಡೆಸಲು ಸಿದ್ಧ: ಸಿಎಂ ಯಡಿಯೂರಪ್ಪ
ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ನಡುವಲ್ಲೂ ಸುರಕ್ಷತಾ ಕ್ರಮಗಳೊಂದಿಗೆ ಏರ್ ಶೋ ನಡೆಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ.
ಬೆಂಗಳೂರು: ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ನಡುವಲ್ಲೂ ಸುರಕ್ಷತಾ ಕ್ರಮಗಳೊಂದಿಗೆ ಏರ್ ಶೋ ನಡೆಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ.
ಕೇಂದ್ರದ ರಕ್ಷಣಾ ಉತ್ಪನ್ನಗಳ ಇಲಾಖೆಯು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಬುಧವಾರ ಆಯೋಜಿಸಿದ್ದ 13ನೇ ಆವೃತ್ತಿಯ ಮೆಗಾ ಅಂತಾರಾಷ್ಟ್ರೀಯ ಏರೋ ಶೋ- ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಸಂಬಂಧಿಸಿದ ರಾಯಭಾರಿಗಳ ದುಂಡು ಮೇಜಿನ ವರ್ಚುಯಲ್ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿ ಮಾತನಾಡಿದರು.
ಏರೋ ಇಂಡಿಯಾ-2021 ವೈಮಾನಿಕ ಪ್ರದರ್ಶನ ಫೆ.3ರಿಂದ 7ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ಇದರ ಯಶಸ್ಸಿಗೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಕೊರೋನಾ ಭೀತಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಈ ವೈಮಾನಿಕ ಪ್ರದರ್ಶನದ ಆಯೋಜನೆಗೆ ಸಂಬಂಧಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ನಡೆದ ವರ್ಚುವಲ್ ಸಭೆಯ ನಂತರ ಮುಖ್ಯಮಂತ್ರಿಗಳು ಈ ವಿಚಾರ ತಿಳಿಸಿದ್ದಾರೆ.
ಕಳೆದ ಹನ್ನೆರಡು ಏರೋ ಶೋ ಆವೃತ್ತಿಗಳಿಗೆ ಕರ್ನಾಟಕ ಅತಿಥೇಯ ರಾಜ್ಯವಾಗಿ ಉತ್ತಮ ಅನುಭವವನ್ನು ಹೊಂದಿದೆ. ಪ್ರಸಕ್ತ ಸಾಲಿನಲ್ಲಿಯೂ ಫೆಬ್ರವರಿ 3 ರಿಂದ 7, 2021 ರವರೆಗೆ ಆಯೋಜಿಸಿರುವ 13ನೇ ಆವೃತ್ತಿಯ ಮೆಗಾ ಅಂತಾರಾಷ್ಟ್ರೀಯ ಏರೋ ಶೋ- ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಕರ್ನಾಟಕ ಅತಿಥೇಯ ರಾಜ್ಯವಾಗಿ ಈ ಬಾರಿಯೂ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ.
ಕೋವಿಡ್ 19 ಸಾಂಕ್ರಾಮಿಕದ ನಡುವೆಯೂ ಇಂತಹ ಮಹತ್ವಪೂರ್ಣ ಕಾರ್ಯಕ್ರಮವನ್ನು ಆಯೋಜಿಸುವುದು ಕರ್ನಾಟಕ ರಾಜ್ಯ ಹಾಗೂ ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ಒಂದು ಸವಾಲಿನ ವಿಷಯ. ಏರೋ ಇಂಡಿಯಾ 2021ರ ವೆಬ್ಸೈಾಟ್ ಪ್ರಾರಂಭವಾದ ಕೂಡಲೇ ವಸ್ತುಪ್ರದರ್ಶನಕ್ಕಾಗಿ ಈಗಾಗಲೇ ಆಸಕ್ತರು ಬಹುಪಾಲು ಸ್ಥಳವನ್ನು ಕಾಯ್ದಿರಿಸಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಸರ್ಕಾರ ಅನೇಕ ಪೂರಕ ಕ್ರಮಗಳನ್ನು ಕೈಗೊಂಡಿದ್ದು, ಭಾರತ ಸರ್ಕಾರದ ಆರೋಗ್ಯ ಸಚಿವಾಲಯದ ಎಲ್ಲ ಮಾರ್ಗಸೂಚಿಗಳನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದಿದ್ದಾರೆ.