ರಾಜ್ಯ

ಉಪಚುನಾವಣೆ: ಮತದಾನದ ದಿನದಂದು ಸರ್ಕಾರಿ ನೌಕರರು, ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಣೆ

Lingaraj Badiger

ಬೆಂಗಳೂರು: ರಾಜ್ಯದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 3 ರಂದು ಉಪ ಚುನಾವಣೆ ನಡೆಯಲಿದ್ದು, ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲಾ ಕಾರ್ಮಿಕರಿಗೆ ಹಾಗೂ ಸರ್ಕಾರಿ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ರಜೆ ಘೋಷಿಸಲಾಗಿದೆ.

ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಿದೆ. 

ಮತ ಚಲಾಯಿಸಲು ಎಲ್ಲಾ ಸಂಸ್ಥೆಗಳು-ನಿಯೋಜಕರು ಅನುವು ಮಾಡಿಕೊಡಬೇಕು. ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಮತ ಚಲಾಯಿಸಲು ಅರ್ಹ ಕಾರ್ಮಿಕರು ಮತದಾನ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ-ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಕಾರ್ಮಿಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜತೆಗೆ ಉಪ ಚುನಾವಣೆ ನಡೆಯುತ್ತಿರುವ ಮತ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ಸಾವ್ರರ್ತಿಕ ರಜೆ ಘೋಷಿಸಿದೆ.

ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರಗಳ ವ್ಯಾಪ್ತಿಯ ಹೊರಗಡೆ ಕೆಲಸ ನಿರ್ವಹಿಸುತ್ತಿದ್ದು ಮತ್ತು ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತ ಮತದಾರರಾಗಿರುವವರಿಗೆ ಹಾಗೂ ಎಲ್ಲಾ ವ್ಯಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ರಜೆ ಘೋಷಣೆ ಮಾಡಲಾಗಿದೆ.

SCROLL FOR NEXT