ರಾಜ್ಯ

ಬೆಂಗಳೂರು, ಮೈಸೂರು, ಕಲಬುರಗಿಯ ಜಯದೇವ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಳ: ಡಾ. ಕೆ. ಸುಧಾಕರ್ 

Nagaraja AB

ಬೆಂಗಳೂರು: ಹೃದಯ ಸಂಬಂಧಿತ  ಕಾಯಿಲೆಗಳಿಗೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಮೂಲಸೌಕರ್ಯಗಳನ್ನು ಸುಧಾರಿಸಲು, ರಾಜ್ಯ ಸರ್ಕಾರ ನೀಲನಕ್ಷೆಯನ್ನು ಸಿದ್ಧಪಡಿಸಿದೆ.

ಬೆಂಗಳೂರು, ಮೈಸೂರು ಮತ್ತು ಕಲಬುರಗಿಯ ಜಯದೇವ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳನ್ನು ಹೆಚ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಜಯದೇವ ಹೃದ್ರೋಗ ಸಂಸ್ಥೆಯ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಬೆಂಗಳೂರಿನ ಜಯದೇವ ಆಸ್ಪತ್ರೆಯ ಹಾಸಿಗೆಗಳ ಸಂಖ್ಯೆಯನ್ನು 700ರಿಂದ 1 ಸಾವಿರ ಹೆಚ್ಚಿಸಲಾಗುವುದು, ಆ ಮೂಲಕ ದೇಶದಲ್ಲಿ 1 ಸಾವಿರ ಹಾಸಿಗೆ ಸಾಮರ್ಥ್ಯವಿರುವ ದೊಡ್ಡ ಹೃದಯ ಆಸ್ಪತ್ರೆಯನ್ನಾಗಿ ಮಾಡಲಾಗುವುದು ಎಂದರು.

ಸುಧಾಮೂರ್ತಿ ಅವರ ಇನ್ಫೋಸಿಸ್ ಫೌಂಡೇಶನ್ ವತಿಯಿಂದ 50 ಕೋಟಿ ವೆಚ್ಚದಲ್ಲಿ ಆಧುನಿಕ ಸಲಕರಣೆಗಳನ್ನು ಒದಗಿಸಲಾಗುತ್ತಿದೆ. ಮೈಸೂರಿನಲ್ಲಿ ರೋಗಿಗಳ ಸಾಂದ್ರತೆ ಹೆಚ್ಚಳ ಹಿನ್ನೆಲೆಯಲ್ಲಿ ಒಂದು ಆಫರೇಷನ್ ಥಿಯೇಟರ್ ಜೊತೆಗೆ ಹಾಸಿಗೆ ಸಾಮರ್ಥ್ಯವನ್ನು 400ಕ್ಕೆ ಹೆಚ್ಚಿಸಲಾಗುತ್ತಿದೆ ಎಂದು ಹೇಳಿದರು.

ಕಲ್ಯಾಣ ಕಲ್ಯಾಣದ ಜನರಿಗೆ ಚಿಕಿತ್ಸೆ ಒದಗಿಸಲು ಜೆಐಎಂಎಸ್ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಜಯದೇವ ಆಸ್ಪತ್ರೆ ಶಾಖೆಯನ್ನು ತೆರೆಯಲಾಗಿದ್ದು, ಅಲ್ಲಿ ಆಪರೇಷನ್ ಕೂಡಾ ಮಾಡಲಾಗುವುದು, ಹೊಸ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಮಂಜೂರಾತಿ ದೊರೆತಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭಿಸಲಾಗುವುದು, ಇದಕ್ಕಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಧಿಯಿಂದ 37 ಕೋಟಿ ರೂ. ಬಿಡುಗಡೆಯಾಗಿದೆ  ಎಂದು ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಲ್ಯಾಬೊರೇಟರಿ ಸ್ಥಾಪನೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಪತ್ರ ಬರೆದಿದ್ದು, ಕೇಂದ್ರ ಸರ್ಕಾರ ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಜಿಕೆವಿಕೆ ಕ್ಯಾಂಪಸ್ ನಲ್ಲಿ 5 ಎಕರೆ ಜಮೀನನ್ನು ಹಂಚಿಕೆ ಮಾಡಲಾಗಿದೆ ಎಂದು ಡಾ. ಕೆ. ಸುಧಾಕರ್ ಮಾಹಿತಿ ನೀಡಿದರು.

SCROLL FOR NEXT