ರಾಜ್ಯ

ಪ್ರವಾಹದಲ್ಲಿ ಸಿಲುಕಿದವರ ರಕ್ಷಣೆಗೆ ಎನ್‌ಡಿಆರ್‌ಎಫ್‌ ತಂಡ ರವಾನೆ: ಗೃಹ ಸಚಿವ ಬೊಮ್ಮಾಯಿ‌

Srinivasamurthy VN

ಉಡುಪಿ: ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಅಧಿಕವಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಮಿಲಿಟರಿ ಹೆಲಿಕಾಪ್ಟರ್ ಬಳಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಜೆ ಜಲಾಶಯದ ಬಳಿಯ ಕಿರು ಜಲವಿದ್ಯುತ್ ಸ್ಥಾವರದ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಎನ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಶೀಘ್ರವೇ ಜನರ ಪ್ರಾಣ ರಕ್ಷಣೆಗೆ ತುರ್ತು ಕ್ರಮಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ. ಪ್ರವಾಹದಲ್ಲಿ 250 ಜನ ಸಿಲುಕಿಕೊಂಡಿದ್ದು, ಅವರ ರಕ್ಷಣೆಗೆ ಎಸ್‌ಡಿಆರ್‌ಎಫ್‌ ತಂಡ ದೌಡಾಯಿಸಿದೆ ಎಂದರು.

ಉಡುಪಿ ತಾಲ್ಲೂಕಿನ ನಾಲ್ಕು ಗ್ರಾಮಗಳು ಸಂಪೂರ್ಣ ಜಲಾವೃತವಾಗಿದ್ದು, ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದರು. ಈಗಾಗಲೇ ಎನ್‌ಡಿಆರ್‌ಎಫ್‌ ತಂಡ ಮಂಗಳೂರಿನಿಂದ ಉಡುಪಿಗೆ ತೆರಳಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ. ಇನ್ನೂ, ನದಿಗಳು ತುಂಬಿ  ಹರಿಯುತ್ತಿರುವುದರಿಂದ ಕಾರ್ಕಳ ತಾಲ್ಲೂಕಿನಲ್ಲಿ ಹಲವು ಸೇತುವೆಗಳು ಕುಸಿದಿವೆ. ಹೀಗಾಗಿ ಅಲ್ಲಿನ ನದಿತಟದ ಜನರನ್ನು ಸ್ಥಳಾಂತರಿಸಲಾಗುತ್ತಿದೆ. ಅಲ್ಲದೇ, ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದರು.

SCROLL FOR NEXT