ಬೆಂಗಳೂರು: ರೈತರಿಗೆ ಮಾರಕವಾಗಿರುವ ಮಸೂದೆಗಳನ್ನು ಕೈಬಿಡುವಂತೆ ಆಗ್ರಹಿಸಿ ಸೆ.28ಕ್ಕೆ ರಾಜ್ಯ ಬಂದ್'ಗೆ ಕರೆ ನೀಡಿರುವ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳ ಐಕ್ಯ ಹೋರಾಟ ಸಮಿತಿಯ ಸದಸ್ಯರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ನಡೆಸಿದ ಸಂಧಾನ ಸಭೆ ವಿಫಲವಾಗಿದ್ದು, ಸೋಮವಾರ ಬಂದ್ ನಡೆಸುವುದು ನಿಶ್ಚಿತವಾಗಿದೆ.
ರಾಜ್ಯದಲ್ಲಿ ರೈತರ ಪ್ರತಿಭಟನೆಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ನಿನ್ನೆ ರೈತರ ಮುಖಂಡರೊಂದಿಗೆ ಸಿಎಂ ಯಡಿಯೂರಪ್ಪ ಅವರು ಸಭೆ ನಡೆಸಿ ಮಾತುಕತೆ ನಡೆಸಿದರು. ಸಭೆಯಲ್ಲಿ ರೈತರ ಆಗ್ರಹಗಳನ್ನು ಆಲಿಸಿದ ಮುಖ್ಯಮಂತ್ರಿಗಳು, ಭೂ ಸುಧಾರಣಾ ತಿದ್ದುಪಡಿ ಹಾಗೂ ಎಪಿಎಂಸಿ ಮಸೂದೆಗಳನ್ನು ಕೈಬಿಡಬೇಕು ಎಂಬ ಕೋರಿಕೆ ಒಪ್ಪಲು ನಿರಾಕರಿಸಿದ್ದರು, ಅಲ್ಲದೆ, ಕೇಂದ್ರ ಸರ್ಕಾರದ ನಿರ್ದೇಶನದಂತೆ ಇವುಗಳನ್ನು ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದಕ್ಕೆ ಬೇಸರಗೊಂಡಿರುವ ರೈತ ಮುಖಂಡರು ಪ್ರತಿಭಟನೆ ಕೈಬಿಡಲು ಸಾಧ್ಯವಿಲ್ಲ. ಸೆ.23 ರಂದು ಕರೆ ನೀಡಿರುವ ರಾಜ್ಯ ಬಂದ್ ನಡೆಸುವುದು ನಿಶ್ಚಿತ ಎಂದು ತಿಳಿಸಿದ್ದಾರೆ.
ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಮಸೂದೆಗಳು ರೈತವಿರೋಧಿಯಾಗಿದೆ. ಇವುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ನಗರದ ಫ್ರೀಡಂ ಪಾರ್ಕ್'ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ರಾಜ್ಯದಾದ್ಯಂತ ನಡೆದ ಸಾಂಕೇತಿಕ ಪ್ರತಿಭಟನೆ ತೀವ್ರವಾಗಿದೆ ಈ ಹಿನ್ನೆಲೆಯಲ್ಲಿ ರೈತ ಸಂಘಟನೆ ಮುಖಂಡರ ಜೊತೆಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿದರು. ಮಾಸೂದೆಗಳನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಕಾಯ್ದೆಯಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ. ಬದಲಾದಲ್ಲಿ ಜಮೀನು ಹೊಂದುವ ಮಿತಿ ಕಡಿಮೆ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ. ಆದರೆ, ಇದಕ್ಕೆ ನಮ್ಮ ಒಪ್ಪಿಗೆ ಇಲ್ಲ. ಈ ಹಿನ್ನೆಲೆಯಲ್ಲಿ ಬಂದ್ ಮಾಡುತ್ತೇವೆಂದು ಸ್ಪಷ್ಟಪಡಿಸಿದ್ದಾರೆ.