ರಾಜ್ಯ

ಆಸ್ಪತ್ರೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ: ಬೊಮ್ಮಾಯಿ ಖಡಕ್ ಸೂಚನೆ

Srinivas Rao BV

ಬೆಂಗಳೂರು: ಗ್ರಾಮೀಣ ಪ್ರದೇಶಗಳಿಗೆ ತಾರತಮ್ಯವಿಲ್ಲದ ಮತ್ತು ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು ವಿಶೇಷವಾಗಿ ಸೋರಿಕೆ ತಡೆಗಟ್ಟಿ, ಸ್ವಾವಲಂಬನೆ ಜೊತೆಗೆ ಸಮರ್ಪಕ ನಿರ್ವಹಣೆ  ಹೆಚ್ಚಿನ ಕಾಳಜಿ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ  ಸೂಚಿಸಿದ್ದಾರೆ.

ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಸಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಈ ಸೂಚನೆ ನೀಡಿದ್ದಾರೆ. ಕೊರೋನ ಸಮಯದಲ್ಲಿ  ಆಸ್ಪತ್ರೆಗಳಿಗೆ ವಿದ್ಯುತ್ ಪೂರೈಕೆಯಲ್ಲಿ  ಯಾವುದೇ  ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಮಾರುಕಟ್ಟೆ ಸ್ಥಿತಿಗತಿಯನ್ನು ಆಧರಿಸಿ ಹೆಚ್ಚಿನ ದರಕ್ಕೆ ವಿದ್ಯುತ್ತನ್ನು ಮಾರಾಟ ಮಾಡುವಂತಾಗಬೇಕು. ಕರ್ನಾಟಕ ವಿದ್ಯುತ್ ನಿಗಮದಿಂದ ವಿದ್ಯುತ್ ಉತ್ಪಾದನೆ ಅತ್ಯಂತ ದಕ್ಷತೆಯಿಂದ ಆಗಬೇಕು. ಜಲ ಮತ್ತು ವಿದ್ಯುತ್ ಘಟಕಗಳು ಅತಿ ಹೆಚ್ಚು ಕಾರ್ಯ ಕ್ಷಮತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಿಸಲಾಗಿರುವ ಬೋರ್ ವೆಲ್ ಗಳಿಗೆ ಯಾವುದೇ ರೀತಿಯ ತಡ ಮಾಡದೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಕೋವಿಡ್ ಸಂದರ್ಭದಲ್ಲಿ ವಿಶೇಷವಾಗಿ ಆಸ್ಪತ್ರೆಗಳಿಗೆ ವಿದ್ಯುತ್ ಸರಬರಾಜಿನಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿರ್ದೇಶನ ನೀಡಿದರು. 

ಸಭೆಯಲ್ಲಿ ಇಂಧನ ಸಚಿವ ಸುನೀಲ್ ಕುಮಾರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್,ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್,  ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕಿ ಡಾ. ಎನ್.ಮಂಜುಳಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

SCROLL FOR NEXT