ರಾಜ್ಯ

ಪ್ರತಿದಿನ 5 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡುವುದು ನಮ್ಮ ಗುರಿ: ಕೇಂದ್ರಕ್ಕೆ ಸಿಎಂ ಬೊಮ್ಮಾಯಿ ಹೇಳಿಕೆ

Shilpa D

ಬೆಂಗಳೂರು: ರಾಜ್ಯಕ್ಕೆ ಪ್ರತಿ ದಿನ 5 ಲಕ್ಷ ಡೋಸ್ ಕೋವಿಡ್ ಲಸಿಕೆ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಗುರುವಾರ ನವ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಈಗ ಪ್ರತಿ ದಿನ 3.5 ಲಕ್ಷದಿಂದ 4 ಲಕ್ಷ ಲಸಿಕೆ ರಾಜ್ಯಕ್ಕೆ ಪೂರೈಕೆ ಆಗುತ್ತಿದೆ. ಸೆಪ್ಟೆಂಬರ್ ತಿಂಗಳಿಂದ ಪ್ರತಿ ದಿನ 5 ಲಕ್ಷ ಲಸಿಕೆ ಹಾಕಲು ರಾಜ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂಬ ಸಂಗತಿಯನ್ನು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಅವರ ಗಮನಕ್ಕೆ ತರಲಾಯಿತು. ರಾಜ್ಯದ ಈ ಪ್ರಸ್ತಾವನೆಗೆ ಅವರು ಒಪ್ಪಿಗೆ ಸೂಚಿಸಿದರು. ಮುಂದಿನ ದಿನಗಳಲ್ಲಿ ಪ್ರತಿದಿನ 5 ಲಕ್ಷ ಡೋಸ್ ಲಸಿಕೆ ನೀಡುವ ಭರವಸೆ ನೀಡಿದರು ಎಂದು ಅವರು ಹೇಳಿದರು.

ಇದರ ಜೊತೆ ಜಲಶಕ್ತಿ‌ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗಿದೆ. ಮೇಕೆದಾಟು, ಮಹದಾಯಿ, ಎತ್ತಿನ ಹೊಳೆ, ಕೃಷ್ಣ ಮೇಲ್ಡಂಡೆ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿರುವ ಜಲವಿವಾದ ಕೇಸ್‌ಗಳ ಬಗ್ಗೆ ಅಡ್ವಕೇಟ್ ಜನರಲ್ ಜೊತೆ ಚರ್ಚೆ ಮಾಡಲಾಗಿದೆ. ಅದರ ಜೊತೆ ಹಣಕಾಸು ಸಚಿವರನ್ನು ಭೇಟಿ ಮಾಡಿ, ಜಿಎಸ್‌ಟಿ ಪರಿಹಾರ ಮುಂದುವರಿಸಲು ಮನವಿ ಮಾಡಲಾಗಿದೆ. ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಚರ್ಚೆ ಮಾಡುವುದಗಿ ಭರವಸೆ ನೀಡಿದ್ದಾರೆ ಎಂದರು.

ಜೊತೆಗೆ ಹೊಸ ಜವಳಿ ನೀತಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಕರ್ನಾಟಕದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೇಂದ್ರ ಜವಳಿ ಖಾತೆ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿ ಮಾಡಿದ್ದೆ. ಈ ಸಂದರ್ಭದಲ್ಲಿ ಅವರು ವಿಷಯ ತಿಳಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿದ್ದೆ. ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಬಗ್ಗೆ ಚರ್ಚೆ ನಡೆಸಿದೆ. ದೇಶದಲ್ಲಿಯೇ ಮೊಟ್ಟ ಮೊದಲ ರಾಜ್ಯವಾಗಿ ಕರ್ನಾಟಕ ಅನುಷ್ಠಾನಕ್ಕೆ ತಂದಿದೆ ಎಂದು ಬೊಮ್ಮಾಯಿ ಹೇಳಿದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಡಾ. ಕೆ.ಸುಧಾಕರ್, ಸಂಸದ ಶಿವಕುಮಾರ್ ಉದಾಸಿ , ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

SCROLL FOR NEXT