ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವಾರಣಾಸಿಗೆ ಭೇಟಿ ನೀಡಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಜತೆ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸಭೆ ಫಲಪ್ರದವಾಗಿತ್ತು ಎಂದು ಹೇಳಿದರು.
ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿಸಿದರು.
ಸಭೆಯಲ್ಲಿ ವಿವಿಧ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಬಹುದಾದ ಕೆಲವು ಹೊಸ ಅಭಿವೃದ್ಧಿ ಯೋಜನೆಗಳ ಬಗ್ಗೆ ಬೆಳಕು ಚೆಲ್ಲಲಾಯಿತು ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಸರ್ಕಾರ ಮನಸ್ಸು ಮಾಡಿದ್ರೆ ಏನು ಬೇಕಾದ್ರು ಮಾಡಬಹುದು ಎಂಬುದಕ್ಕೆ ಕಾಶಿ ವಿಶ್ವನಾಥನ ಕಾರಿಡಾರ್ ಸಾಕ್ಷಿ: ಸಿಎಂ ಬೊಮ್ಮಾಯಿ
ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಮುಖ್ಯಮಂತ್ರಿಗಳ ಈ ಸಭೆಯು ಜನರ ಅನುಕೂಲಕ್ಕಾಗಿ ಕಲ್ಯಾಣ ಕಾರ್ಯಕ್ರಮಗಳ ವಿಚಾರ ವಿನಿಮಯದ ಮೇಲೆ ಕೇಂದ್ರೀಕರಿಸಿತ್ತು ಎಂದು ಹೇಳಿದರು.
ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣದ ರಾಜ್ಯಗಳ ಸಂಸತ್ತಿನ ಸದಸ್ಯರೊಂದಿಗೆ ವರ್ಚುವಲ್ ಸಭೆ ಕರೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕರ್ನಾಟಕದ ಎಲ್ಲಾ 25 ಲೋಕಸಭಾ ಸಂಸದರು ಸಭಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.