ಬೆಳಗಾವಿ: ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ದರ ಹಾಗೂ ಮಾರುಕಟ್ಟೆ ಒದಗಿಸಲು ಪೂರಕ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಇಂದು ನೇಕಾರರ ಸಮಸ್ಯೆ ಕುರಿತ ಸಭೆಯಲ್ಲಿ ನೇಕಾರರ ಬೇಡಿಕೆಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿ, ಸರ್ಕಾರ ವಿವಿಧ ಇಲಾಖೆಗಳಿಗೆ ಅಗತ್ಯವಿರುವ ಬಟ್ಟೆ, ಸೀರೆಗಳನ್ನು ನೇಕಾರರ ಸಾಮರ್ಥ್ಯಕ್ಕೆ ಅನುಗುಣವಾಗಿ ಖರೀದಿಸುವ ಪ್ರಮಾಣವನ್ನು ನಿಗದಿಪಡಿಸಲಾಗುವುದು, ಕೈಮಗ್ಗ ಅಭಿವೃದ್ಧಿ ನಿಗಮದ ಮೂಲಕ ಉತ್ಪನ್ನಗಳಿಗೆ ಡಿಜಿಟಲ್ ವೇದಿಕೆಯಲ್ಲೂ ಮಾರುಕಟ್ಟೆ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಗಿರಿಜನ ಉಪಯೋಜನೆ ಮಾದರಿಯಲ್ಲಿ ವೃತ್ತಿಪರ ನೇಕಾರರಿಗೆ ಸಹಾಯಧನ ನೀಡುವ ಬೇಡಿಕೆ ಕುರಿತು ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಸಕಾರಾತ್ಮಕವಾಗಿ ಸೂಕ್ತ ಆದೇಶ ಹೊರಡಿಸಲಾಗುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮಾದರಿಯಲ್ಲಿ ನೇಕಾರರಿಗೂ ವಿವಿಧ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಉದ್ಯಮಗಳಿಗೆ ಅಲ್ಪ ಪ್ರಮಾಣದ ಸೆಸ್ ವಿಧಿಸುವ ಮೂಲಕ ನೆರವು ನೀಡಲು ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ನೇಕಾರರು ವಾಸಿಸುವ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮ ಕಾಲೋನಿಗಳನ್ನಾಗಿ ಪರಿವರ್ತಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಕಂದಾಯ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ, ನೇಕಾರರಿಗೆ ಸಂಬಂಧಿಸಿದ ಮೂರು ನಿಗಮಗಳನ್ನು ಒಗ್ಗೂಡಿಸಿ ಬಲಪಡಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ ಎಂದರು.