ರಾಜ್ಯ

ಬೆಂಗಳೂರು: ಶಿವಾಜಿ ಪ್ರತಿಮೆಗೆ ಅಪರಿಚಿತರಿಂದ ಮಸಿ, ಪ್ರಕರಣ ದಾಖಲು

Manjula VN

ಬೆಂಗಳೂರು: ಸದಾಶಿವನಗರದಲ್ಲಿರುವ ಛತ್ರಪತಿ ಶಿವಾಜಿ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿಸಿದಿರುವ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಕೆಲವೇ ನಿಮಿಷಗಳಲ್ಲಿ ಪ್ರತಿಮೆಯನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡಿದರು. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಶಿವಾಜಿ ಪ್ರತಿಮೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಿದರು.

ಈ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಶಾಂತಿಭಂಗ ಆರೋಪದಡಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಬೆಳಗಾವಿಯಲ್ಲಿ ಎಂಇಎಸ್ ಮುಖಂಡರ ಮುಖಕ್ಕೆ ಮಸಿ ಬಳಿದ ಘಟನೆಯಿಂದ ಕೆರಳಿದ ಮರಾಠಿಗರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡದ ಬಾವುಟಕ್ಕೆ ಬೆಂಕಿ ಹಚ್ಚಿದ್ದರು. ಈ ಘಟನೆ ಬಗ್ಗೆ ರಾಜ್ಯವ್ಯಾಪಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದ ಕೆರಳಿದವರು ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಎರಚಿರಬಹುದು ಎಂದು ಮೂಲಗಳು ತಿಳಿಸಿವೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ತನಿಖೆ ಆರಂಭಿಸಿದ್ದು, ಘಟನಾ ಸ್ಥಳದ ಸಿಸಿಟಿವಿ ಕ್ಯಾಮೆರಾಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

SCROLL FOR NEXT