ರಾಜ್ಯ

ರೈತರ ಆದಾಯ ಹೆಚ್ಚಿಸಲು ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆಗೆ ಚಿಂತನೆ: ಸಿಎಂ ಬೊಮ್ಮಾಯಿ

Manjula VN

ಮೈಸೂರು: ರೈತರ ಹಿತಾಸಕ್ತಿ ಕಾಪಾಡಲು ಮತ್ತು ಆರ್ಥಿಕವಾಗಿ ಸಬಲೀಕರಣಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಪುನರುಚ್ಚರಿಸಿದರು.

ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಕರ್ನಾಟಕ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿರುವ ಅವರು,, ರೈತರ ಆದಾಯ ಹೆಚ್ಚಿಸಲು ಸರ್ಕಾರ ರೈತರ ನಿರ್ದೇಶನಾಲಯ ಸ್ಥಾಪಿಸಲು ಚಿಂತನೆ ನಡೆಸಿದೆ ಎಂದು ಹೇಳಿದರು.

ಈ ಹಿಂದೆ ಇದ್ದ ಸರ್ಕಾರಗಳು ನಂತರ ಬಂದ ಸರ್ಕಾರಗಳು ಆಹಾರ ಉತ್ಪಾದನೆಗೆ ಹೆಚ್ಚು ಒತ್ತು ನೀಡುತ್ತಿದ್ದವು. ಆದರೆ, ರೈತರ ಆರ್ಥಿಕ ಅಭಿವೃದ್ಧಿಯತ್ತ ಗಮನಹರಿಸಿರಲಿಲ್ಲ. ಈ ಸಮಸ್ಯೆ ನಮ್ಮ ಗಮನದಲ್ಲಿದೆ. ಕೃಷಿ ಜೊತೆಗೆ ಪೂರಕ ಕೃಷಿ ಚಟುವಟಿಕೆ ಹಾಗೂ ಸಮಗ್ರ ಕೃಷಿ ಪದ್ಧತಿ ಅಳವಡಿಕೆಯಿಂದ ರೈತರ ಆದಾಯ ಹೆಚ್ಚಿಸಲು ಸಾಧ್ಯ. ಕೃಷಿ ಉತ್ಪಾದನೆಗೆ ಸಂಶೋಧನೆ ಇದೆ, ಬೀಜಗಳಿವೆ, ಗೊಬ್ಬರ ಇವೆ. ಕೃಷಿ ಉತ್ಪಾದನೆಗಳ ಜೊತೆಗೆ ನಮ್ಮ ಯೋಚನೆ ಮತ್ತು ಯೋಜನೆ ರೈತರ ಬದುಕಿನ ಕಡೆಗೆ ಇರಬೇಕು. ಆತನ ಆರ್ಥಿಕ ಸ್ಥಿತಿ ಉತ್ತಮಗೊಂಡರೆ ಕೃಷಿ ತಂತಾನೆ ಬೆಳೆಯುತ್ತದೆ ಎಂದು ಹೇಳಿದರು.

ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿನಿಯರ ದಾಖಲಾತಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರೈತ ವಿದ್ಯಾ ನಿಧಿ ಯೋಜನೆಯನ್ನು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೂ ವಿಸ್ತರಿಸಲು ಚಿಂತನೆ ನಡೆಸಿದ್ದು, ಮಾರ್ಚ್ ವೇಳೆಗೆ ಈ ಯೋಜನೆ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.

ಇದೇ ವೇಳೆ ಸರ್ಕಾರಿ ಸ್ವಾಮ್ಯದ ಮೈಶುಗರ್ ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ಭರವಸೆ ನೀಡಿದ ಬೊಮ್ಮಾಯಿ, ನ್ಯಾಯಯುತ ಮತ್ತು ಲಾಭದಾಯಕ ಬೆಲೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ವರದಿಯನ್ನು ಅಧಿಕಾರಿಗಳ ಬಳಿ ಕೇಳಲಾಗಿದ್ದು, ವರದಿ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ರೈತ ಮುಖಂಡ ಹಾಗೂ ಕರಂಟಕ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರನ್ನು ಸನ್ಮಾನಿಸಲಾಯಿತು.

SCROLL FOR NEXT