ರಾಜ್ಯ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕಪ್ರಸಂಗತನದ ಹೇಳಿಕೆ: ಸಿದ್ದರಾಮಯ್ಯ ಕಿಡಿ

Raghavendra Adiga

ಬೆಂಗಳೂರು: ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಲಲಿದ್ದೇವೆ ಎನ್ನುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಅಧಿಕಪ್ರಸಂಗತನದಿಂದ ಕೂಡಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಠಾಕ್ರೆ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್ ಮಾಡಿ "ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ.ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು‌ ಬರಬೇಡಿ" ಎಂದು ಕುಟುಕಿದ್ದಾರೆ.

ಅಲ್ಲದೆ "ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ.ಉದ್ಧವ್ ಠಾಕ್ರೆ ಅವರೇ, ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ.

"ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಠಾಕ್ರೆ ಅವರ ಉದ್ಧಟತನದ ಹೇಳಿಕೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು.

"ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೇ, ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ." ಎಂದು ಎಚ್ಚರಿಕೆ ನೀಡಿದ್ದಾರೆ. 

SCROLL FOR NEXT