ರಾಜ್ಯ

ಸರ್ಕಾರಿ ಡಿಗ್ರಿ ಕಾಲೇಜುಗಳಲ್ಲಿ 8500 ಸ್ಮಾರ್ಟ್ ಕ್ಲಾಸ್ ರೂಂ: ಡಿಸಿಎಂ ಅಶ್ವತ್ಥ್ ನಾರಾಯಣ್

Manjula VN

ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಡಿಜಿಟಲ್ ಕಲಿಕೆಗೆ ಒತ್ತು ನೀಡಲು ಸರ್ಕಾರಿ ಪದವಿ ಕಾಲೇಜುಗಳಲ್ಲಿ 8500 ಸ್ಮಾರ್ಟ್ ಕ್ಲಾಸ್ ರೂಂಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಈಘಾಗಲೇ 2500 ಕ್ಲಾಸ್ ರೂಂಗಳ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರು ಶನಿವಾರ ಹೇಳಿದ್ದಾರೆ. 

ಮಲ್ಲೇಶ್ವರದ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಶನಿವಾರ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಉಪ ಮುಖ್ಯಮಂತ್ರಿಗಳು ಮಾತನಾಡಿದರು. 

ಕೋವಿಡ್ ನಂತಹ ಸಂಕಷ್ಟ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಉನ್ನತ ಶಿಕ್ಷಣದಲ್ಲಿ ಡಿಜಿಟಲ್ ಕಲಿಕೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಇದಕ್ಕೆ ಪೂರವಾಗಿ ಕಳೆದ ಶೈಕ್ಷಣಿಕ ವರ್ಷದಲ್ಲಿ 1.10 ಲಕ್ಷ ಲ್ಯಾಪ್ ಟಾಪ್ ಗಳನ್ನು ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿತ್ತು. 

ಅದಕ್ಕಾಗಿ ರೂ.330 ಕೋಟಿ ಖರ್ಚು ಮಾಡಲಾಗಿತ್ತು. ಅದೇ ರೀತಿ ಈ ಶೈಕ್ಷಣಿಕ ವರ್ಷದಲ್ಲಿ 1.60 ಲಕ್ಷದಷ್ಟು ಎಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸಲಾಗಿದೆ. ಡಿಜಿಟಲ್ ಪರಿಕರಗಳನ್ನು ನೀಡಿ ನಮ್ಮ ಸರ್ಕಾರ ಸುಮ್ಮನಾಗಿಲ್ಲ. ಪದವಿ ಕಾಲೇಜುಗಳಲ್ಲಿ 8,500 ತರಗತಿ ಕೊಠಡಿಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಸ್ಮಾರ್ಟ್ ಕ್ಲಾಸ್ ರೂಂಗಳನ್ನಾಗಿ ಪರಿವರ್ತಿಸುವ ಕಾರ್ಯದಲ್ಲಿ ತೊಡಗಿದೆ. ಈ ಪೈಕಿ 2,500 ಕೊಠಡಿಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು. 

SCROLL FOR NEXT