ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೊಂಕಿತರ ಪರೀಕ್ಷೆಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ
ನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದ ಮೂವರು ಶಾಸಕರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಮಾಜಿ ಸ್ಪೀಕರ್ ಹಾಗೂ ಕೋಲಾರದ ಶ್ರೀನಿವಾಸಪುರ ಶಾಸಕ ಕೆ.ಆರ್.ರಮೇಶ್‌ಕುಮಾರ್, ಶಾಸಕ ಎಚ್.ಕೆ.ಪಾಟೀಲ್, ಎಸ್.ಆರ್.ಪಾಟೀಲ್ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆಗೆ ಮಾನ್ಯ ಮಾಡಲು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ನ್ಯಾಯಪೀಠ ನಿರಾಕರಿಸಿದೆ.
ಜೊತೆಗೆ, ಉತ್ತಮ ಸವಲತ್ತುಗಳನ್ನು ಹೊಂದಿರುವ ನೀವು ನಿಮ್ಮ ಕ್ಷೇತ್ರಗಳಲ್ಲಿ ಕೋವಿಡ್-19 ರೋಗಿಗಳಿಗೆ ಎಷ್ಟು ಹಾಸಿಗೆಗಳನ್ನು ಒದಗಿಸಿದ್ದೀರಿ, ತುರ್ತು ಪರಿಸ್ಥಿತಿಯಲ್ಲಿ ಎಷ್ಟು ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡಿದ್ದೀರಿ ಎಂದು ಶಾಸಕರನ್ನಯ ನ್ಯಾಯಪೀಠ ಪ್ರಶ್ನಿಸಿದೆ.
ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿನಿಂದ ಮೃತಪಟ್ಟವರ ದೇಹಗಳನ್ನು ನೀಡುತ್ತಿಲ್ಲ ಎಂದು ರಮೇಶ್‌ಕುಮಾರ್ ಅರ್ಜಿಯಲ್ಲಿ ಆರೋಪಿಸಿದ್ದಾರೆ.
ಇನ್ನೊಬ್ಬ ಶಾಸಕ ಎಚ್ ಕೆ ಪಾಟೀಲ್ ಅವರು, ಆಮ್ಲಜನಕ ಸಿಲಿಂಡರ್‌ಗಳನ್ನು ಶೇಖರಣೆಗಾಗಿ ಲಭ್ಯವಾಗುವಂತೆ ನಿರ್ದೇಶನ ಮಾಡಬೇಕೆಂದು ಮನವಿ ಮಾಡಿದರು.
ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಎಸ್ ಆರ್ ಪಾಟೀಲ್, ಬಾಗಲಕೋಟೆಯಲ್ಲಿ ಕೋವಿಡ್ -19 ರೋಗಿಗಳನ್ನು ಬಿಡುಗಡೆ ಮಾಡಲು ಜಿಲ್ಲಾಡಳಿತವು ನರ್ಸಿಂಗ್ ಹೋಂಗಳನ್ನು ಒತ್ತಾಯಿಸುತ್ತಿದೆ ಎಂದು ಆರೋಪಿಸಿದರು.
ಅರ್ಜಿದಾರರು ಶಾಸಕರಾಗಿ ಖಾಸಗಿ ಆಸ್ಪತ್ರೆಗಳ ಕಾರಣ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟು ಅರ್ಜಿಯನ್ನು ಇತ್ಯರ್ಥಗೊಳಿಸಿತು.