ರಾಜ್ಯ

ರಾಜ್ಯದಲ್ಲಿ ಲಸಿಕೆ ಮಿಶ್ರಣದ ಯಾವುದೇ ಪ್ರಕರಣ ವರದಿಯಾಗಿಲ್ಲ: ಡಿಸಿಎಂ ಅಶ್ವತ್ಥ್ ನಾರಾಯಣ್

Manjula VN

ಬೆಂಗಳೂರು: ರಾಜ್ಯದಲ್ಲಿ ಕೊರೋನಾವೈರಸ್ ಲಸಿಕೆಯ ವಿತರಣೆ ವೇಳೆ ಎರಡು ಕಂಪನಿಯ ಲಸಿಕೆಗಳು ಮಿಶ್ರಣ ಆಗಿರುವ ಕುರಿತು ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಜನರಿಗೆ ಒಂದೇ ಪ್ರಮಾಣದ ಕೊವಿಡ್-19 ಲಸಿಕೆಗಳನ್ನು ನೀಡಲಾಗುತ್ತದೆ. ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯಕೀಯ ಸಿಬ್ಬಂದಿ ತಮ್ಮದೇ ಶೈಲಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಎರಡು ವಿಭಿನ್ನ ಲಸಿಕೆಗಳ ಡೋಸ್ ಅನ್ನು ಒಬ್ಬರಿಗೆ ನೀಡಿರುವ ಬಗ್ಗೆ ಯಾವುದೇ ಪುರಾವೆಗಳು ಸಿಕ್ಕಿಲ್ಲ. ಲಸಿಕೆಗಳ ಮಿಶ್ರಣ ಮಾಡಿ ನೀಡುವುದು ಕಾನೂನುಬದ್ಧವಾಗಿಲ್ಲ ಎಂದು ಹೇಳಿದ್ದಾರೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.  

SCROLL FOR NEXT