ರಾಜ್ಯ

ಜೂನ್ 7ರ ವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಯಲ್ಲಿ ಇರಲಿದೆ: ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

Manjula VN

ಬೆಂಗಳೂರು: ಜೂನ್ 7ರವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಯಲ್ಲಿ ಇರಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸದ್ಯಕ್ಕೆ ಜೂನ್ 7ರವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಾದ ಲಾಕ್ಡೌನ್ ಜಾರಿಯಲ್ಲಿ ಇರಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ ಕೇಂದ್ರ ಗೃಹ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಜೂನ್ 30ರವರೆಗೆ ಬಿಗಿ ಕ್ರಮಗಳು ಇರಬೇಕು ಅಂತ ಹೇಳಿದೆ. ಇದನ್ನು ಯಾವ ರೀತಿ ಜಾರಿ ಮಾಡಬೇಕು ಎಂಬುದರ ಕುರಿತು ಮುಖ್ಯಮಂತ್ರಿಗಳು ಸಚಿವರ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ವಿಸ್ತರಣೆ ಮಾಡಬೇಕಾ ಬೇಡವೋ ಎಂಬ ವಿಚಾರವನ್ನು ತಜ್ಞರ ಜೊತೆ ಚರ್ಚಿಸಿ ನಿರ್ಧಾರ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ತಜ್ಞರ ಜೊತೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಇನ್ನು ಮೂರ್ನಾಲ್ಕು ದಿನಗಳಲ್ಲಿ ಈ ಪೈಕಿ ಒಂದು ನಿರ್ಧಾರ ಕೈಗೊಳ್ಳಲಾಗುತ್ತದೆ. ಆದರೆ 7 ನೇ ತಾರೀಕಿನ ವರೆಗೆ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಯಾರೂ ಸದ್ಯ ಮೈಮರೆಯಬಾರದು. ಕೋವಿಡ್‌ ಪಾಸಿಟಿವ್ ರೇಟ್ ಕಡಿಮೆಯಾಗಬೇಕು, ಸೋಂಕು ಸಂಖ್ಯೆ ಹತೋಟಿಗೆ ಬರಬೇಕು. ಈ ನಿಟ್ಟಿನಲ್ಲಿ ಕಾರ್ಯಚಟುವಟಿಕೆಗಳ ಮೇಲೆ ಜನರೇ ಸ್ವತಃ ನಿರ್ಬಂಧ ಹೇರಿಕೊಳ್ಳಬೇಕು. ಸದ್ಯ ಜಾರಿಯಲ್ಲಿರುವ ಲಾಕ್‌ಡೌನ್ ಒಂದು ವಾರಗಳ ಕಾಲ ಇದೆ. ಎಲ್ಲರೂ ಸಹಕಾರ ಕೊಡಬೇಕು. ಹೀಗಾದರೆ ಕೋವಿಡ್ ನಿಯಂತ್ರಣ ಆಗಲಿದೆ. 7 ತಾರೀಕಿನ ವರೆಗೆ ಕಟ್ಟುನಿಟ್ಟಿನ ಲಾಕ್‌ಡೌನ್ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

SCROLL FOR NEXT