ರಾಜ್ಯ

ಕೋವಿಡ್ ಆತಂಕ: ಮಹಾರಾಷ್ಟ್ರ, ಮುಂಬೈನಿಂದ ಬರುವವರಿಗೆ ಹೊಸ ಮಾರ್ಗಸೂಚಿ ಪ್ರಕಟ

Manjula VN

ಬೆಂಗಳೂರು: ಕೋವಿಡ್ ಸೋಂಕು ಹರಡುವ ಆತಂಕ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂಬೈ, ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಮಹಾರಾಷ್ಟ್ರ, ಮುಂಬೈ ನಗರದಿಂದ ಕಡಿಮೆ ಅವಧಿಯ ಭೇಟಿಗಾಗಿ ರಾಜ್ಯಕ್ಕೆ ಆಗಮಿಸುವವರಿಗೂ ಈ ಮಾರ್ಗಸೂಚಿ ಅನ್ವಯವಾಗಲಿದೆ.

ರಸ್ತೆ,ರೈಲು, ವಿಮಾನದ ಮೂಲಕ ರಾಜ್ಯಕ್ಕೆ ಆಗಮಿಸುವ ಎಲ್ಲರೂ ಈ ಮಾರ್ಗಸೂಚಿ ಪಾಲನೆ ಮಾಡುವುದು ಕಡ್ಡಾಯವಾಗಿದೆ. ಅಲ್ಲದೆ, ಗಡಿಭಾಗದ ಜಿಲ್ಲೆಗಳಲ್ಲಿ ಕಣ್ಗಾವಲು ಇಡುವ ಕುರಿತು ಕೂಡ ಸೂಚನೆಗಳನ್ನು ಇಲಾಖೆ ನೀಡಿದೆ.

ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಪರಿಸ್ಥಿತಿ ಹತೋಟಿಗೆ ಬಂದಿದೆ. ಆದರೆ ರಾಜ್ಯಕ್ಕೆ ಹೋಲಿಕೆ ಮಾಡಿದರೆ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಅಧಿಕವಾಗಿದೆ. ಆದ್ದರಿಂದ ಈ ಮಾರ್ಗಸೂಚಿ ಪ್ರಕಟಿಸಲಾಗಿದೆ ಎಂದು ತಿಳಿದುಬಂದಿದೆ.

ಕೋವಿಡ್ ಮಾರ್ಗಸೂಚಿಗಳ ಅನ್ವಯ ರಾಜ್ಯಕ್ಕೆ ಬರುವ ಪ್ರವಾಸಿಗರು ಕೋವಿಡ್ ನೆಗೆಟಿವ್ ಪ್ರಮಾಣ ಪತ್ರಗಳನ್ನು ತಂದರೆ ಯಾವುದೇ ಪರೀಕ್ಷೆಗಳನ್ನು ಮಾಡುವುದಿಲ್ಲ ಎಂದು ಕರ್ನಾಟಕ ಸ್ಪಷ್ಟಪಡಿಸಿದೆ.

ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಶೀತ, ಕೆಮ್ಮು, ಜ್ವರದ ಲಕ್ಷಣಗಳನ್ನು ಹೊಂದಿರಬಾರದು. ಗಡಿಗಳಲ್ಲಿ ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನ್‌ಗೆ ಒಳಗಾಗಬೇಕು ಎಂದು ಸೂಚಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರವಿದ್ದರೆ ಅದನ್ನು ತೋರಿಸಬೇಕು.

ರಾಜ್ಯದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಕಡಿಮೆ ಅವಧಿಯ ಪ್ರವಾಕ್ಕೆ ಆಗಮಿಸಿದವರು ವಾಪಸ್ ಹೋಗುವ ದಿನಾಂಕದ ಟಿಕೆಟ್ ತೋರಿಸಬೇಕು.

SCROLL FOR NEXT