ರಾಜ್ಯ

ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಕುರಿತು ಕೇಂದ್ರದ ನಿಲುವನ್ನು ಕೇಳಿದ ಕರ್ನಾಟಕ ಹೈಕೋರ್ಟ್!

Vishwanath S

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅಡಿಯಲ್ಲಿ 2021-22ನೇ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ಪದವಿ ಕಾಲೇಜುಗಳಲ್ಲಿ ಕನ್ನಡವನ್ನು ಕಡ್ಡಾಯ ಭಾಷೆಯನ್ನಾಗಿ ಮಾಡುವ ಕುರಿತು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರದ ನಿಲುವನ್ನು ಕೇಳಿದೆ.

ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ, ‘ಸಂಸ್ಕೃತ ಭಾರತಿ ಟ್ರಸ್ಟ್’, ‘ಹಯಗ್ರೀವ ಟ್ರಸ್ಟ್’, ‘ವ್ಯೋಮಾ ಲಿಂಗ್ವಿಸ್ಟಿಕ್ ಲ್ಯಾಬ್ ಫೌಂಡೇಷನ್’ ಹಾಗೂ ‘ಸಂಸ್ಕೃತ ಪ್ರಾಧ್ಯಾಪಕ ಸಂಘ’ಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ ಸಂಬಂಧ ಕೇಂದ್ರ ಸರ್ಕಾರದ ನಿಲುವನ್ನು ಕೇಳಿದೆ. 

ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆಯನ್ನು ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಸುಪ್ರೀಂ ಕೋರ್ಟ್‌ನ ಪೂರ್ವ ನಿದರ್ಶನಗಳಿಗೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಎಸ್‌.ಎಸ್ ನಾಗಾನಂದ ಪುನರುಚ್ಚರಿಸಿದರು.

ಬೇರೆ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳು 12ನೇ ತರಗತಿವರೆಗೆ ಕನ್ನಡವನ್ನು ಓದದೇ ಇರುವ ವಿದ್ಯಾರ್ಥಿಗಳು ಪದವಿ ಹಂತದಲ್ಲಿ ಕನ್ನಡವನ್ನು ಒಂದು ವಿಷಯವಾಗಿ ಅಧ್ಯಯನ ಮಾಡಲು ಸಾಧ್ಯವಾಗದ ಕಾರಣ ಅನುತ್ತೀರ್ಣರಾಗುವ ಸಾಧ್ಯತೆ ಹೆಚ್ಚಿರುತ್ತದೆ. ಕನ್ನಡ ಕಡ್ಡಾಯ ಮಾಡಿರುವುದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಯಾವ ಭಾಷೆ ಕಲಿಯಬೇಕು ಎಂಬುದು ವಿದ್ಯಾರ್ಥಿಯ ಇಚ್ಛೆಗೆ ಬಿಟ್ಟ ವಿಚಾರ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಇನ್ನು ರಾಜ್ಯ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ‘ಸರ್ಕಾರದ ಈ ಆದೇಶ ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧವಾಗಿಲ್ಲ. ವಿದ್ಯಾರ್ಥಿಗಳಿಗೆ ಕನ್ನಡವನ್ನು ಒಂದು ಭಾಷೆಯಾಗಿ ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಕನ್ನಡ ಗೊತ್ತಿಲ್ಲದವರಿಗೆ ಸರಳವಾಗಿ ಕನ್ನಡ ಕಲಿಸಲು ಪ್ರತ್ಯೇಕ ಪಠ್ಯವನ್ನೂ ರೂಪಿಸಲಾಗಿದೆ. ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ಕಲಿಸುವ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯ ಪ್ರವೇಶಿಸಲು ನಿರಾಕರಿಸಿದೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠ, ಕನ್ನಡ ಕಲಿಕೆಗೆ ಪ್ರೋತ್ಸಾಹಿಸುವುದು ಸರಿ. ಆದರೆ, ಅದನ್ನು ಕಡ್ಡಾಯ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದೆ. ಈ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರವು ತನ್ನ ನಿಲುವು ಸ್ಪಷ್ಟಪಡಿಸುವಂತೆ ಸೂಚಿಸಿ ವಿಚಾರಣೆಯನ್ನು ನವೆಂಬರ್ 30ಕ್ಕೆ ಮುಂದೂಡಿದೆ.

SCROLL FOR NEXT