ರಾಜ್ಯ

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಕ್ರಮ: ರಾಜ್ಯ ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ ನೀಡಿದ ಹೈಕೋರ್ಟ್

Lingaraj Badiger

ಬೆಂಗಳೂರು: ರಾಜ್ಯಾದ್ಯಂತ ಇರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಸಂಬಂಧಿಸಿದಂತೆ ಕ್ರಮ ಕೈಗೊಂಡ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೋಮವಾರ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಇದರಿಂದ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ನಿಟ್ಟುಸಿರು ಬಿಡುವಂತಾಗಿದೆ.

ಸುಪ್ರೀಂಕೋರ್ಟ್ ನಿರ್ದೇಶನ ಅನ್ವಯ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತು ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಹಿಂದಿನ ಆದೇಶದಂತೆ ಅನಧಿಕೃತವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕೇಂದ್ರಗಳ ವಿರುದ್ಧ ಕ್ರಮ ಕೈಗೊಂಡ ಬಗ್ಗೆ ಹೈಕೋರ್ಟ್ ಗೆ ಸೆಪ್ಟೆಂಬರ್ 17ರಂದು ರಾಜ್ಯ ಸರ್ಕಾರ ವರದಿ ಸಲ್ಲಿಸಬೇಕಿತ್ತು. ಆದರೆ, ಆಗ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಅವರು ಕಾಲಾವಕಾಶ ಕೋರಿದ್ದರಿಂದ ನ್ಯಾಯಾಲಯವು ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿತ್ತು.

ವಿಚಾರಣೆಯ ಸಂದರ್ಭದಲ್ಲಿ ಸರ್ಕಾರಿ ವಕೀಲರು ನ್ಯಾಯಾಲಯದ ನಿರ್ದೇಶನದಂತೆ ಕ್ರಮ ಕೈಗೊಂಡ ಬಗ್ಗೆ ವರದಿ ಸಲ್ಲಿಸಲು ನಾಲ್ಕು ವಾರ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಅದಕ್ಕೆ ಸಮ್ಮತಿಸಿದ ನ್ಯಾಯಾಲಯವು ವಿಚಾರಣೆ ಮುಂದೂಡಿದೆ.

ರಾಜ್ಯದಲ್ಲಿ ಕಾನೂನುಬಾಹಿರವಾಗಿ ಸಾರ್ವಜನಿಕ ಸ್ಥಳದಲ್ಲಿ ತಲೆ ಎತ್ತಿರುವ ಎಲ್ಲಾ ಧರ್ಮಗಳ ಧಾರ್ಮಿಕ ಕಟ್ಟಡಗಳನ್ನು ಸಂರಕ್ಷಿಸುವ ಸಂಬಂಧ ರಾಜ್ಯ ಸರ್ಕಾರವು ಈಚೆಗೆ ಕರ್ನಾಟಕ ಧಾರ್ಮಿಕ ಕಟ್ಟಡಗಳ(ಸಂರಕ್ಷಣೆ)2021 ಕಾಯಿದೆ ರೂಪಿಸಿದ್ದು, ಉಭಯ ಸದನಗಳಲ್ಲೂ ಅದಕ್ಕೆ ಒಪ್ಪಿಗೆ ಪಡೆದಿದೆ. ಆದರೆ, ರಾಜ್ಯಪಾಲರು ಕಾಯಿದೆಗೆ ಸಹಿ ಹಾಕಿಲ್ಲ. ಈ ಕುರಿತು ರಾಜ್ಯ ಸರ್ಕಾರವು ನ್ಯಾಯಾಲಯಕ್ಕೆ ಯಾವುದೇ ತೆರೆನಾದ ಮಾಹಿತಿ ನೀಡಿಲ್ಲ.

SCROLL FOR NEXT