ರಾಜ್ಯ

ಎಲ್ಲ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Nagaraja AB

ಬೆಂಗಳೂರು: ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಸದಾ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅರಮನೆ ಮೈದಾನದಲ್ಲಿಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯೋಜಿಸಿರುವ 'ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಗಾರ' ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿವೆ. ರಕ್ಷಣೆ, ಬಯೋಟೆಕ್ನಾಲಜಿ, ಇಂಜಿನಿಯರಿಂಗ್, ವೈಮಾನಿಕ, ಬಾಹ್ಯಾಕಾಶ ಸೇರಿದಂತೆ ಸುಮಾರು 180ಕ್ಕೂ ಹೆಚ್ಚು  
ಅಂತಾರಾಷ್ಟ್ರೀಯ ಮಟ್ಟದ ಪ್ರಮುಖ ಸಂಶೋಧನಾ ಮತ್ತು ಅಭಿವೃದ್ಧಿ ಕಂಪನಿಗಳು ಬೆಂಗಳೂರಿನಲ್ಲಿರುವುದಾಗಿ ತಿಳಿಸಿದರು.

ಇಡೀ ದೇಶದಲ್ಲೇ ಅತಿ ಹೆಚ್ಚು ನವೋದ್ಯಮಗಳು ಕರ್ನಾಟಕದಲ್ಲಿದೆ. ದೇಶದಲ್ಲೇ ಮೊದಲ ಬಾರಿಗೆ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ, ಉದ್ಯೋಗ ನೀತಿಗಳನ್ನು ಕರ್ನಾಟಕ ಸರ್ಕಾರ ರೂಪಿಸುತ್ತಿದೆ. ಯುವ ಜನತೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಕರ್ನಾಟಕ ಅತ್ಯುತ್ತಮ ರಾಜ್ಯ ಎಂದರು.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಸ್ಟಾರ್ಟ್ ಅಪ್, ಮೇಕ್ ಇನ್ ಇಂಡಿಯಾ ಮತ್ತಿತರ ಯೋಜನೆಗಳ ಪ್ರಯೋಜನಗಳನ್ನು ಯುವಜನತೆಗೆ ತಿಳಿಸುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾತನಾಡಿ, ಯುವಕರು ಇನ್ನೊಬ್ಬರ ಕೈ ಕೆಳಗಡೆ ಕೆಲಸ ಮಾಡುವ ಬದಲು ತಾವೇ ಉದ್ಯಮ ಸ್ಥಾಪಿಸಿ ಇನ್ನೊಬ್ಬರಿಗೆ ಉದ್ಯೋಗ ನೀಡಬೇಕು ಎಂದು ಕರೆ ನೀಡಿದರು.

ದೇಶದಲ್ಲಿ ಉದ್ಯಮಗಳು ಸ್ಥಾಪನೆಯಾಗಬೇಕು ಎಂಬ ಉದ್ದೇಶದಿಂದ ಪ್ರಧಾನಿ ಮೋದಿ ಮೇಕ್ ಇನ್ ಇಂಡಿಯಾ ಕಾರ್ಯಕ್ರಮ ಜಾರಿಗೆ ತಂದಿದ್ದು, ಕರ್ನಾಟಕದಲ್ಲಿ ಉದ್ಯಮ ಸ್ಥಾಪನೆಗೆ ವಿಫುಲ ಅವಕಾಶವಿದೆ. ಮೇಕ್ ಇನ್ ಇಂಡಿಯಾ ಕೈಗಾರಿಕೆ ಸ್ಥಾಪನೆಗೆ ಕ್ರಾಂತಿಕಾರಿಯಾಗಿದೆ. ಕೈಗಾರಿಕೆ ಸ್ಥಾಪನೆಗೆ ಬೆಂಗಳೂರಿನಂತೆಯೇ ಎರಡನೇ ಹಂತದ ನಗರಗಳಲ್ಲಿ ಕೂಡಾ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದರು.

SCROLL FOR NEXT