ರಾಜ್ಯ

ಗಣೇಶ ಚತುರ್ಥಿ ಪ್ರಯುಕ್ತ ಬೆಂಗಳೂರಿನಿಂದ 1 ಸಾವಿರ ಹೆಚ್ಚುವರಿ ಕೆಎಸ್ಆರ್ ಟಿಸಿ ಬಸ್ ಸೇವೆ

Shilpa D

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರ ಕಚೇರಿ ಗೌರಿ, ಗಣೇಶ ಹಬ್ಬದ ಪ್ರಯುಕ್ತ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಮಾಡಿದೆ. ಬೆಂಗಳೂರು ನಗರದಿಂದ ಬೇರೆ-ಬೇರೆ ಸ್ಥಳಗಳಿಗೆ ಪ್ರಯಾಣಿಸುವ ಜನರು ಬಸ್‌ಗಳ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. 

ಗೌರಿ, ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸೆಪ್ಟೆಂಬರ್ 8 ಮತ್ತು 9ರಂದು ಬೆಂಗಳೂರು ನಗರದಿಂದ 1000 ಹೆಚ್ಚುವರಿ ವಾಹನಗಳ ವ್ಯವಸ್ಥೆಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಮಾಡಿದೆ.

ಜನರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ ಪಿಕ್ ಅಪ್ ಪಾಯಿಂಟ್ ಹೆಸರನ್ನು ಗಮನಿಸುವಂತೆ ಸೂಚಿಸಲಾಗಿದೆ.

ಜನರು ಇ-ಟಕೆಟ್‌ಗಳನ್ನು https://ksrtc.karnataka.gov.in/ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಬುಕ್ ಮಾಡಬಹುದಾಗಿದೆ. ಜನರು ಕರ್ನಾಟಕ ಮತ್ತು ಅಂತರರಾಜ್ಯದಲ್ಲಿ ಇರುವ 685 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮೂಲಕವೂ ಟಿಕೆಟ್ ಕಾಯ್ದಿರಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು ಮತ್ತು ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಬೇಡಿಕೆಗೆ ಅನುಗುಣವಾಗಿ ವಿಶೇಷ ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ಕೆಎಸ್ಆರ್‌ಟಿಸಿ ಹೇಳಿದೆ.

ಮೆಜೆಸ್ಟಿಕ್‌ನಿಂದ ಬಸ್‌ಗಳ ಸಂಚಾರ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸಂಚಾರ ನಡೆಸಲಿದೆ. ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಯ ಬಸ್‌ಗಳು ಸಂಚರಿಸುತ್ತವೆ.

ಶಾಂತಿನಗರದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶ/ತೆಲಂಗಾಣ ಕಡೆಗೆ ಅಂದರೆ ಮಧುರೆ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಂಬತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಸಂಚಾರ ನಡೆಸಲಿವೆ. ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿ ಮುಂತಾದ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
 

SCROLL FOR NEXT