ರಾಜ್ಯ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ, ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

Nagaraja AB

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ರಾಜ್ಯದಲ್ಲಿ 30 ಲಕ್ಷ ಲಸಿಕೆ ಹಾಕುವ ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಚಾಲನೆ ನೀಡಿದರು. 

ಇದೇ ಸಂದರ್ಭದಲ್ಲಿ ಕೋವಿಡ್ ವಾರಿಯರ್ ಗಳಿಗೆ ಸನ್ಮಾನಿಸಲಾಯಿತು. ಸಚಿವರಾದ ಮುರುಗೇಶ್ ನಿರಾಣಿ, ಮುನಿರತ್ನ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಸರ್ದಾರ್ ವಲ್ಲಭಬಾಯ್ ಪಟೇಲ್ ಪುತ್ಹಳಿಗೆ ಮಾಲಾರ್ಪಣೆ, ನಂತರ ಧ್ವಜಾರೋಹಣ ನೆರೆವೇರಿಸಿ ಮಾತನಾಡಿದ ಮುಖ್ಯಮಂತ್ರಿ, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸ್ಥಾಪನೆಯಾದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ನೀಡಲಾಗುತ್ತಿರುವ 1500 ಕೋಟಿ ಅನುದಾನದ ಜೊತೆಗೆ ಹೆಚ್ಚುವರಿಯಾಗಿ 1500 ಕೋಟಿ ನೀಡಲಾಗುವುದು ಎಂದು ಘೋಷಿಸಿದರು.

ಈ ಭಾಗದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ರಾಜ್ಯ ಸರ್ಕಾರ ಇಲ್ಲಿಯವರೆಗೆ 8 ಸಾವಿರ ಕೋಟಿ ಗೂ ಅಧಿಕ ಮೊತ್ತವನ್ನು ಬಿಡುಗಡೆ ಮಾಡಿದೆ. ಈ ಪೈಕಿ 6 ಸಾವಿರ ಕೋಟಿ ಖರ್ಚಾಗಿದೆ. ಉಳಿದ 2 ಸಾವಿರ ಕೋಟಿಯನ್ನು ಬರುವ ಮಾರ್ಚ್ ನೊಳಗೆ ಖರ್ಚು ಮಾಡಬೇಕು, ಅಂದಾಗ ಮಾತ್ರ ಹೆಚ್ಚುವರಿ 1500 ಕೋಟಿ ಬಿಡುಗಡೆ ಮಾಡುವುದಾಗಿ ಷರತ್ತು ವಿಧಿಸಿದರು.

ನಂಜುಂಡಪ್ಪ ವರದಿ ಅನ್ವಯ ಈ ಭಾಗದ ಆರ್ಥಿಕ, ಶೈಕ್ಷಣಿಕ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು, ಐದು ವರ್ಷಗಳಲ್ಲಿ ಹೊಸ ರೂಪದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದರು.

371 (ಜೆ) ಕಲಂನಿಂದ ಈ ಭಾಗದ ಲಕ್ಷಾಂತರ ಜನರಿಗೆ ಉದ್ಯೋಗ, ಶೈಕ್ಷಣಿಕ ಕ್ಷೇತ್ರದಲ್ಲಿ ಅವಕಾಶ ಸಿಕ್ಕಿದೆ. ಯಾದಗಿರಿಯಲ್ಲಿ ಫಾರ್ಮ ಪಾರ್ಕ್ ಮಾಡಲು ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

SCROLL FOR NEXT