ರಾಜ್ಯ

ರಾಜ್ಯದ ಸ್ಮಾರಕಗಳನ್ನು ದತ್ತು ಪಡೆಯುವಂತೆ ಕಾರ್ಪೊರೇಟ್‌ ಕಂಪನಿಗಳಿಗೆ ಪತ್ರ: ಸಿಎಂ ಬೊಮ್ಮಾಯಿ

Lingaraj Badiger

ಬೆಂಗಳೂರು: ರಾಜ್ಯದಲ್ಲಿರುವ ಸ್ಮಾರಕಗಳನ್ನು ದತ್ತು ತೆಗೆದುಕೊಂಡು ಅವುಗಳ ಸಂರಕ್ಷಣೆ ಮತ್ತು ನಿರ್ವಹಣೆಯಲ್ಲಿ ತೊಡಗಿಸಿಕೊಳ್ಳುವಂತೆ ಕಾರ್ಪೊರೇಟ್ ಸಂಸ್ಥೆಗಳಿಗೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ತಿಳಿಸಿದ್ದಾರೆ.

ಇಂದು ಪ್ರವಾಸೋದ್ಯಮ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಬೊಮ್ಮಾಯಿ, ಸ್ಮಾರಕಗಳು ಮತ್ತು ಅವುಗಳ ನಿರ್ವಹಣೆಗೆ ಅಗತ್ಯವಿರುವ ಮೂಲ ಸೌಕರ್ಯಗಳ ಪಟ್ಟಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ರಾಜ್ಯದ ಸ್ಮಾರಕಗಳ ಸಂರಕ್ಷಣೆ ಮತ್ತು ನಿರ್ವಹಣೆಗಾಗಿ ಈ ಬಜೇಟ್ ನಲ್ಲಿ ಘೋಷಿಸಿರುವಂತೆ ಸ್ಮಾರಕಗಳನ್ನು ದತ್ತು ಪಡೆಯುವ ಯೋಜನೆಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಸ್ಮಾರಕಗಳ ವಿವರ ಹಾಗೂ ತಗಲುವ ವೆಚ್ಚದ ಪಟ್ಟಿ ಸಿದ್ಧಪಡಿಸಿಕೊಂಡು, ವೆಬ್ಸೈಟ್ ರೂಪಿಸಬೇಕು. ಜೊತೆಗೆ ಈ ಕುರಿತು ಕಾರ್ಪೊರೇಟ್ ಕಂಪನಿಗಳಿಗೆ ಖುದ್ದಾಗಿ ಪತ್ರ ಬರೆಯುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಅಲ್ಲದೆ ಈ ಸಂಬಂಧ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತರೊಂದಿಗೆ ಸಮನ್ವಯ ಸಾಧಿಸುವಂತೆ ಪ್ರವಾಸೋದ್ಯಮ ಇಲಾಖೆಗೆ ಸಿಎಂ ಸೂಚಿಸಿದರು.

ಮುಂದಿನ ದಿನಗಳಲ್ಲಿ ಕರ್ನಾಟಕದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಿಸಿಬೇಕು. ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಿ ಉತ್ತಮ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಪ್ರಚಾರವನ್ನು ನೀಡುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು. ಮೈಸೂರು-ಬೇಲೂರು-ಹಳೇಬೀಡು ಮತ್ತು ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲಿನ ಪ್ರವಾಸೋದ್ಯಮ ಸರ್ಕ್ಯೂಟ್‌ಗಳನ್ನು ಸಹ ಅಭಿವೃದ್ಧಿಪಡಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.

ದಸರಾ ವೇಳೆಗೆ ಮೈಸೂರು ಪ್ರವಾಸೋದ್ಯಮ ಸರ್ಕ್ಯೂಟ್ ಉದ್ಘಾಟನೆಗೆ ಸಿದ್ಧವಾಗಬೇಕು ಮತ್ತು ದೀಪಾವಳಿಗೆ ಹಂಪಿ ಸರ್ಕ್ಯೂಟ್ ಅನ್ನು ಸಿದ್ಧಪಡಿಸಬೇಕು. ಈ ಸರ್ಕ್ಯೂಟ್‌ಗಳು ಸಾಹಸ ಕ್ರೀಡೆಗಳು ಮತ್ತು ಮನರಂಜನಾ ಚಟುವಟಿಕೆಗಳನ್ನು ಒಳಗೊಂಡಿರಬೇಕು ಎಂದು ಸಿಎಂ ಸೂಚಿಸಿದ್ದಾರೆ.

SCROLL FOR NEXT