ರಾಜ್ಯ

ಪಂಚಮಸಾಲಿ ಮೀಸಲಾತಿ: ಸರ್ಕಾರ ನೇಮಿಸಿದ್ದ ನ್ಯಾ. ಸುಭಾಷ್ ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಹೈಕೋರ್ಟ್‌ ತಡೆ

Shilpa D

ಬೆಂಗಳೂರು: ವೀರಶೈವ-ಲಿಂಗಾಯತ ಪಂಚಮಸಾಲಿ ಉಪ ಪಂಗಡವನ್ನು 2ಎಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ಮುಂದಿನ ಆದೇಶದವರೆಗೆ ಮುಂದುವರಿಯದಂತೆ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಕಾನೂನಿಗೆ ವಿರುದ್ಧವಾಗಿ ಉನ್ನತ ಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ, ಇದಕ್ಕೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವೆಂಕಟರಾಮಯ್ಯ ಅವರು ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ ವೀರಪ್ಪ ಮತ್ತು ಕೆ ಎಸ್‌ ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ ನಡೆಸಿತು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವಡಗಿ ಅವರು “ಈ ಪ್ರಕರಣದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗವನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿಸಬೇಕಿದೆ” ಎಂದು ವಾದಿಸಿದ್ದರು.

ಆಯೋಗವನ್ನು ಪ್ರತಿವಾದಿಗಳನ್ನಾಗಿಸಲಾಗುವುದು ಎಂದು ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು ಪೀಠದ ಗಮನಕ್ಕೆ ತಂದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಆಗಸ್ಟ್‌ 24ಕ್ಕೆ ಮುಂದೂಡಿದೆ.

ಪಂಚಮಸಾಲಿ ಉಪ ಪಂಗಡವನ್ನು 3ಬಿ ವಿಭಾಗದಿಂದ 2ಎ ವ್ಯಾಪ್ತಿಗೆ ಸೇರ್ಪಡೆ ಮಾಡಬೇಕೆಂಬ ಬೇಡಿಕೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ನ್ಯಾಯಮೂರ್ತಿ ಸುಭಾಷ್ ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರವು 2021ರ ಜುಲೈ 1ರಂದು ಆದೇಶ ಹೊರಡಿಸಿದೆ.

SCROLL FOR NEXT