ರಾಜ್ಯ

ಕೊಪ್ಪಳ: ಕುಡಿಯುವ ನೀರು ಪೂರೈಕೆಗೆ ಆಗ್ರಹ, ಗ್ರಾಮ ಪಂಚಾಯಿತಿ ಸದಸ್ಯರ ಧರಣಿ 

Nagaraja AB

ಕೊಪ್ಪಳ: ಕೊಪ್ಪಳ ಜಿಲ್ಲೆಯ ಸಿದ್ದಾಪುರ ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಸದಸ್ಯರು ಧರಣಿ ನಡೆಸುತ್ತಿದ್ದಾರೆ. ಕಳೆದ ಹಲವು ತಿಂಗಳಿಂದ ನಿರಂತರ ಕುಡಿಯುವ ನೀರು ಪೂರೈಕೆ ಕುರಿತು ಗ್ರಾಮಸ್ಥರು ಒತ್ತಡ ಹೇರುತ್ತಿರುವುದರಿಂದ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಪ್ರತಿಭಟನೆ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ತಿಳಿಸಿದರು.

ಈ ಸಂಬಂಧ  ಗ್ರಾ.ಪಂ.ಅಧ್ಯಕ್ಷರಿಗೆ ಹಾಗೂ ಸಿಬ್ಬಂದಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮಕೈಗೊಂಡಿಲ್ಲ. ಕುಡಿಯುವ ನೀರು ಪೂರೈಸಲು ವಾರ್ಡ್ ಆಯ್ಕೆ ಮಾಡುವಾಗ ಸಂಬಂಧಪಟ್ಟ ಸಿಬ್ಬಂದಿ  ತಾರತಮ್ಯ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದರೂ ಕುಡಿಯುವ ನೀರು ಪೂರೈಕೆ ಮಾಡುವಲ್ಲಿ  ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಮತ್ತೊಬ್ಬ ಸದಸ್ಯ ಚೆನ್ನಬಸವನಗೌಡ ಹೇಳಿದರು.

ಕುಡಿಯುವ ನೀರು ಪೂರೈಕೆಯನ್ನು ಖಾಸಗಿ ಗುತ್ತಿಗೆದಾರರಿಗೆ ವಹಿಸಿರುವುದು ಸಮಸ್ಯೆಗೆ ಮೂಲವಾಗಿದ್ದು, ಅವರ ಪಾವತಿಗಳನ್ನು ನಿಲ್ಲಿಸಬೇಕು ಎಂದು ಸದಸ್ಯರು ಹೇಳಿದರು. ಆದರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ಧರಣಿ ನಿರತ ಸದಸ್ಯರಿಗೆ ಹಾಗೂ ನಿವಾಸಿಗಳಿಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರಿಂದ ಸದಸ್ಯರು ಧರಣಿ ಹಿಂಪಡೆದರು.

SCROLL FOR NEXT