ರಾಜ್ಯ

ಮತದಾರರ ಮಾಹಿತಿ ಕಳವು ಪ್ರಕರಣ: ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

Manjula VN

ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಎಂಬ ಎನ್‌ಜಿಒಗೆ ಪೊಲೀಸರು ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೆಟ್ಟಿಲೇರಿರುವ ಬೆಂಗಳೂರು ನಗರ ಡಿಸಿ ಕೆ ಶ್ರೀನಿವಾಸ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿದೆ.

ಬಿಬಿಎಂಪಿ ನೀಡಿದ ದೂರಿನ ಮೇರೆಗೆ ಹಲಸೂರು ಗೇಟ್ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದು, ಚಿಲುಮೆ ಮಾಲೀಕರು ಸೇರಿದಂತೆ 13 ಮಂದಿಯನ್ನು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿರುವ, ಸದ್ಯ ಸೇವೆಯಿಂದ ಅಮಾನತುಗೊಂಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಮತ್ತು ಚಿಲುಮೆ ಸಂಸ್ಥೆಯ ಸಿಬ್ಬಂದಿಯಾದ ಜ್ಯೋತಿ ಲಕ್ಷ್ಮಿ,ಕೆಂಪೇಗೌಡ ಸಲ್ಲಿಸಿದ್ದ ಪ್ರತ್ಯೇಕ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಧೀಶ ಸಿ.ಆರ್. ಹೇಮಂತ್ ಕುಮಾರ್ ಅವರಿದ್ದ ಪೀಠ ಆದೇಶಿಸಿದೆ.

ಪ್ರಕರಣ ಸಂಬಂಧ ವಿವರಣೆ ನೀಡಲು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಕಳೆದ ವಾರ ಕೆ.ಶ್ರಿನಿವಾಸ್ ಅವರಿಗೆ ಹಲಸೂರು ಗೇಟ್ ಠಾಣಾಧಿಕಾರಿ ನೋಟಿಸ್ ಜಾರಿಗೊಳಿಸಿದ್ದರು.

ವಿಚಾರಣೆಗೆ ಹಾಜರಾಗದ ಶ್ರಿನಿವಾಸ್ ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಡಿ.2ರಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಸಂಬಂಧ ವಿಚಾರಣೆ ಪೂರ್ಣಗೊಳಿಸಿ ಡಿ.7ರಂದು ಕಾಯ್ದಿಸಿರಿದ್ದ ತೀರ್ಪನ್ನು ನ್ಯಾಯಾಲಯ ಗುರುವಾರ ಪ್ರಕಟಿಸಿದೆ.

ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿರುವ ಹಿನ್ನೆಲೆಯಲ್ಲಿ ಶ್ರೀನಿವಾಸ್ ಅವರು ಹೈಕೋರ್ಟ್‌ ಮೆಟ್ಟಿಲೇರಬಹುದು’ ಎಂದು ಹಲಸೂರು ಗೇಟ್‌ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಿಸಿ ಜಾಮೀನು ಅರ್ಜಿ ತಿರಸ್ಕೃತಗೊಂಡಿರುವ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಾಲ್ವರು ಬಿಬಿಎಂಪಿ ಕಂದಾಯ ಅಧಿಕಾರಿಗಳಿಗೆ ಜಾಮೀನು ಸಿಗುವುದು ಕಷ್ಟಕರವಾಗಲಿದೆ ಎಂದು ಹೇಳಿದ್ದಾರೆ.

ಈ ನಡುವೆ ಅಮಾನತುಗೊಂಡಿರುವ ಬಿಬಿಎಂಪಿ ಆಡಳಿತ ಆಯುಕ್ತ ಎಸ್.ರಂಗಪ್ಪ ಅವರು ನಿನ್ನೆ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದು, ಲಿಖಿತ ಉತ್ತರಗಳನ್ನು ನೀಡಿದರು.

ಶ್ರೀನಿವಾಸ್‌ ಅವರು ಮಹದೇವಪುರ ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದರೆ, ಎಸ್‌ ರಂಗಪ್ಪ ಅವರು ಶಿವಾಜಿನಗರ ಮತ್ತು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದರು.

ಈ ಇಬ್ಬರನ್ನೂ ಸೇವೆಯಿಂದ ಅಮಾನತು ಮಾಡಿ, ಇಲಾಖಾ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗವು ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರವು ಇಬ್ಬರೂ ಅಧಿಕಾರಿಗಳನ್ನು ಅಮಾನತು ಮಾಡಿದ್ದು, ಲಿಖಿತ ಅನುಮತಿ ಇಲ್ಲದೆ ಕೇಂದ್ರಸ್ಥಾನ ತೊರೆಯದಂತೆ ನಿರ್ಬಂಧ ವಿಧಿಸಿದೆ.

ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಖಾಸಗಿ ವ್ಯಕ್ತಿಗಳಿಗೆ ಮತಗಟ್ಟೆ ಹಂತದ ಅಧಿಕಾರಿಗಳು (ಬಿಎಲ್‌ಒ/ಬಿಎಲ್‌ಸಿ) ಎಂದು ಗುರುತಿನ ಚೀಟಿ ವಿತರಿಸಿರುವುದು ಪೊಲೀಸ್‌ ತನಿಖೆಯಲ್ಲಿ ಪತ್ತೆಯಾಗಿದೆ.

ಈ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿರುವ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರವಾಗಿ ಪರಿಶೀಲನೆ ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ್ದ ಕೇಂದ್ರ ಚುನಾವಣಾ ಆಯೋಗವು ಲೋಪ ತಡೆಯುವಲ್ಲಿ ವಿಫಲರಾದ ಆರೋಪದಲ್ಲಿ ಶ್ರೀನಿವಾಸ್‌ ಮತ್ತು ರಂಗಪ್ಪ ಅವರ ಅಮಾನತಿಗೆ ಸೂಚಿಸಿತ್ತು.

SCROLL FOR NEXT