ರಾಜ್ಯ

ಪಂಚಮಸಾಲಿಗಳು ಸುವರ್ಣ ವಿಧಾನಸೌಧಕ್ಕೆ ನುಗ್ಗುವುದಿಲ್ಲ ಎಂಬ ವಿಶ್ವಾಸವಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

Manjula VN

ಬೆಳಗಾವಿ: ಪಂಚಮಸಾಲಿ ಲಿಂಗಾಯತರು ತಮ್ಮ ಬೇಡಿಕೆಗಳ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾಕಾರರ ಸಂಖ್ಯೆಗೆ ಅನುಗುಣವಾಗಿ ಪೊಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನಾನಿರತ ಪಂಚಮಸಾಲಿಗಳು ವಿಧಾನಸೌಧಕ್ಕೆ ನುಗ್ಗುವುದಿಲ್ಲ ಎಂಬ ವಿಶ್ವಾಸವಿದೆ. ಪ್ರತಿಭಟನೆಗೆ ಪಂಚಮಸಾಲಿಗಳಿಗೆ ಸ್ಥಳಾವಕಾಶ ನೀಡಲಾಗಿದೆ. ಅದಕ್ಕೆ ಅನುಗುಣವಾಗಿ ಪೊಲೀಸ್ ನಿಯೋಜನೆ ಹಾಗೂ ಇತರೆ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಗಡಿ ವಿವಾದ ಕುರಿತು ಸಂಜಯ್ ರಾವತ್ ನೀಡಿದ್ದ ಹೇಳಿಕೆ ಕುರಿತು ಮಾತನಾಡಿ, ಅವರ ಭಾಷೆ ಅವರ ಅಪ್ರಬುದ್ಧತೆಯನ್ನು ತೋರಿಸುತ್ತದೆ. ಅವರಿಗೆ ಚೀನಾ-ಭಾರತ ಗಡಿ ಮತ್ತು ಮಹಾರಾಷ್ಟ್ರ-ಕರ್ನಾಟಕ ನಡುವಿನ ವ್ಯತ್ಯಾಸ ತಿಳಿದಿಲ್ಲ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಜೀವಿಸುತ್ತಿದ್ದೇವೆ ಮತ್ತು ಮಹಾರಾಷ್ಟ್ರ ಸರ್ಕಾರವು ಇಂತಹ ಬೆಳವಣಿಗೆಗಳಿಗೆ ಅವಕಾಶ ನೀಡುವುದಿಲ್ಲ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ.

ನಾವು ನಮ್ಮ ನಿಲುವಿಗೆ ಬದ್ಧರಾಗಿದ್ದೇವೆ. ಯಾವುದೇ ಸಂಘಟನೆ ಅಥವಾ ವ್ಯಕ್ತಿ ಎರಡು ರಾಜ್ಯಗಳ ನಡುವೆ ಸಮಸ್ಯೆಯನ್ನು ಸೃಷ್ಟಿಸಲು ಪ್ರಯತ್ನಿಸಿದರೆ ಅದನ್ನು ಯಾವ ರೀತಿ ಎದುರಿಸಬೇಕೆಂಬುದು ನಮಗೆ ತಿಳಿದಿದೆ ಎಂದಿದ್ದಾರೆ.

SCROLL FOR NEXT