ರಾಜ್ಯ

ಕೊಡಗು: ಮಡಿಕೇರಿಯಲ್ಲಿ ಮಳೆಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ, ಪರಿಹಾರ ಚೆಕ್ ವಿತರಣೆ

Sumana Upadhyaya

ಮಡಿಕೇರಿ: ಭಾರೀ ಮಳೆಯಿಂದ ವ್ಯಾಪಕ ಹಾನಿಗೀಡಾಗಿರುವ ಕೊಡಗು ಜಿಲ್ಲೆಗೆ ಇಂದು ಸಂಪುಟದ ಸಹೋದ್ಯೋಗಿಗಳು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಳೆಗೆ ಗೋಡೆ ಕುಸಿತಗೊಂಡು ನೆಲೆ ಕಳೆದುಕೊಂಡಿರುವ ಜನರನ್ನು ಭೇಟಿ ಮಾಡಿ ಅವರ ಕಷ್ಟಗಳನ್ನು ಆಲಿಸಿದರು, ಸರ್ಕಾರದ ವತಿಯಿಂದ ಪರಿಹಾರದ ಚೆಕ್ ವಿತರಿಸಿದರು.

ನಂತರ ಸಿಎಂ ನೇತೃತ್ವದಲ್ಲಿ ಮಡಿಕೇರಿಯಲ್ಲಿ, ಜಿಲ್ಲೆಯಲ್ಲಿ ಮಳೆಗೆ ಆದ ಆಸ್ತಿಪಾಸ್ತಿ ನಷ್ಟ, ಜನಹಾನಿ, ತೊಂದರೆ ಮತ್ತು ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಬಗ್ಗೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದ್ದು, ಉಸ್ತುವಾರಿ ಸಚಿವರು, ಕಂದಾಯ ಸಚಿವ ಆರ್ ಅಶೋಕ್, ಸಿ.ಸಿ ಪಾಟೀಲ್, ಆರ್ ನಾಗೇಶ್ ಸಂಸದರಾದ ಪ್ರತಾಪ್ ಸಿಂಹ, ಶಾಸಕರು, ಅಧಿಕಾರಿಗಳು ಭಾಗಿಯಾಗಿದ್ದಾರೆ.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಪ್ರಾಣ ಮತ್ತು ಆಸ್ತಿ ಹಾನಿಯಾಗಿರುವ ಪ್ರದೇಶಗಳಲ್ಲಿ ಜನರ ಮನ ಓಲೈಸುವ ಕೆಲಸ ಮಾಡುತ್ತೇವೆ. ಸೆಸ್ಮಿಕ್ ವಲಯಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗುತ್ತಿದೆ. ಮಳೆಯಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಕೆಲವು ಕಡೆ ಭೂಕುಸಿತವಾಗಿದ್ದು, ಕೊಡಗಿನಲ್ಲಿ ಭೂಕಂಪ, ಕಡಲುಕೊರೆತವಾಗಿದ್ದು, ಉತ್ತರ ಕರ್ನಾಟಕದಲ್ಲಿ ನದಿ ಪಕ್ಕದಲ್ಲಿರುವ ಮನೆಗಳಿಗೆ ಹಾನಿಯಾಗಿದೆ. ಅಲ್ಲಲ್ಲಿ ಜಲಾಶಯಗಳಿಂದ ನೀರು ಹೊರಬಿಟ್ಟ ಸಂದರ್ಭದಲ್ಲಿ ಬೆಳೆ ಹಾನಿಯಾಗಿದೆ. ಈ ಬಗ್ಗೆ ಸಮೀಕ್ಷೆ ಯಾಗಿದೆ. ಪ್ರಥಮ ಹಂತದ ಸಮೀಕ್ಷೆಯಾಗಿದೆ. ಈ ಬಗ್ಗೆ ನಿಖರ ಮಾಹಿತಿ ನೀಡಲಾಗುವುದು ಎಂದರು.

ಹಾನಿಗೀಡಾದವರ ಮನೆಗಳಿಗೆ ಭೇಟಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಡಿಕೇರಿಯ ಮಲ್ಲಿಕಾರ್ಜುನ ನಗರ ಬಡಾವಣೆಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಿಗೊಳಗಾದ ಮನೆಯ ಮಾಲೀಕರಾದ ಗೋಪಾಲ ಅವರ ಕುಟುಂಬಕ್ಕೆ 1 ಲಕ್ಷದ 5 ಸಾವಿರ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಶಿಕ್ಷಣ ಸಚಿವ ಬಿಸಿ ನಾಗೇಶ್ ಮತ್ತು ಇತರರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಜಿಲ್ಲೆಗೆ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, 2018ರ ಮಾನದಂಡ ಇಟ್ಟುಕೊಂಡು ಮಳೆ ಎದುರಿಸಲು ಜಿಲ್ಲಾಡಳಿತ ತಯಾರಾಗಿದೆ. ಜನ ಆತಂಕಪಡುವ ಅಗತ್ಯವಿಲ್ಲ, ಸರಕಾರ ಜನರ ಜೊತೆಗಿದೆ. ಜಿಲ್ಲೆಯ 3 ಸೇತುವೆ, 2 ದೇವಾಲಯಗಳಿಗೆ ಮಳೆಯಿಂದ ಹಾನಿಯಾಗಿದೆ. ಮಳೆಯಿಂದ ಹಾನಿಯಾದ ಮನೆಗಳಿಗೆ ಕೂಡಲೇ ಪರಿಹಾರ ವಿತರಿಸಲಾಗಿದೆ ಎಂದರು.

SCROLL FOR NEXT