ರಾಜ್ಯ

ಸೋನಿಯಾ ಇಡಿ ತನಿಖೆಗೆ ವಿರೋಧ, ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

Nagaraja AB

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೊಳಪಡಿಸುವುದನ್ನು ವಿರೋಧಿಸಿ ಕಾಂಗ್ರೆಸ್ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಜಿಲ್ಲಾ ಮಟ್ಟದಲ್ಲಿ ಭಾರೀ ಪ್ರತಿಕ್ರಿಯೆ ವ್ಯಕ್ತವಾಯಿತು.

ಮಂಡ್ಯ ಹಾಗೂ ಮೈಸೂರಿನಲ್ಲಿ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ, ಸೋನಿಯಾ ಗಾಂಧಿ ಇಡಿ ತನಿಖೆಗೆಯನ್ನು ಖಂಡಿಸಿದರು. ಮಂಗಳೂರಿನಲ್ಲೂ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಜೋರಾಗಿತ್ತು. ಬ್ಯಾರಿಕೇಡ್ ಗಳನ್ನು ಮುರಿದು ಪ್ರತಿಭಟನೆ ನಡೆಸಲು ಮುಂದಾದ ಪ್ರತಿಭಟನಾಕಾರರು ಪೊಲೀಸರು ಬಂಧಿಸಿ ಕರೆದೊಯ್ದರು.

ಶಿವಮೊಗ್ಗದ ಶಿವಪ್ಪ ನಾಯಕ ವೃತ್ತದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ  ಧ್ರವನಾರಾಯಣ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಬೇಳೂರು ಗೋಪಾಲ ಕೃಷ್ಣ ಮತ್ತಿತರರು ಭಾಗವಹಿಸಿದರು. ಮುಖಂಡರು, ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಪೊಲೀಸ್ ವಾಹನ ಸುತ್ತುವರೆದ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ರಸ್ತೆ ಮೇಲೆ ಕುಳಿತು ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು.

ತುಮಕೂರು, ಧಾರವಾಡ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ  ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಸೋನಿಯಾ ಗಾಂಧಿ ಅವರ ಇಡಿ ತನಿಖೆಯನ್ನು ಖಂಡಿಸಿದರು. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ  ಕೇಂದ್ರಿಯ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. 

SCROLL FOR NEXT