ರಾಜ್ಯ

ಕೊಲೆಗಡುಕರ ಪಕ್ಷ, ಜಾತಿ, ಧರ್ಮ ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಲಿ: ಸಿದ್ದರಾಮಯ್ಯ

Shilpa D

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹತ್ಯೆಯನ್ನು ಖಂಡಿಸಿದ್ದಾರೆ.

ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪೊಲೀಸರು ಪ್ರವೀಣ್ ನೆಟ್ಟಾರ್ ಹತ್ಯೆಗೆ ಕಾರಣರಾದ ಹಂತಕರನ್ನು ತಕ್ಷಣ ಕೊಲೆಗಡುಕರನ್ನು ಬಂಧಿಸಬೇಕು. ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು. ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಸರ್ಕಾರವನ್ನ ಒತ್ತಾಯಿಸಿದ್ದಾರೆ.

ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳ ಅವಧಿಯಲ್ಲಿ ಮಸೂದ್ ಮತ್ತು ಪ್ರವೀಣ್ ಹತ್ಯೆಯಾಗಿದ್ದು ಅತ್ಯಂತ ನೋವಿನ ವಿಚಾರ. ಕೊಲೆಗಡುಕರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್ ಒತ್ತಾಯಿಸಿದ್ದಾರೆ.  ಸಮಾಜ ಘಾತುಕ ಶಕ್ತಿಗಳು, ಕೊಲೆಗಡುಕರಿಗೆ ಸರ್ಕಾರದ ಭಯವಿಲ್ಲ ಎಂಬುದಕ್ಕೆ ಇತ್ತೀಚಿನ ದಿನಗಳಲ್ಲಿ ಆದಂತಹ ಘಟನೆಗಳೇ ಇದಕ್ಕೆ ಸಾಕ್ಷಿ. ಈ ಸರ್ಕಾರದಲ್ಲಿ ಜನಸಾಮಾನ್ಯರಿಗೆ ರಕ್ಷಣೆ, ನೆಮ್ಮದಿಯ ವಾತಾವರಣ ಇಲ್ಲ ಎಂದು ಅವರು ದೂರಿದರು.

ಎಲ್ಲಾ ಜಾತಿ, ಮತ,ವರ್ಗದವರು ಒಂದಾಗಿ ಯಾರೇ ಸಮಾಜ ಘಾತುಕ ಶಕ್ತಿಗಳು, ಕೊಲೆ ಗಡುಕರು ಆಗಲಿ ಅವರ ವಿರುದ್ಧ ಹೋರಾಡಲು ಒಟ್ಟಾಗಬೇಕು ಮತ್ತು ಇಂತಹ ಕೃತ್ಯ ನಡೆಸಿದವರನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ಕೊಡಬೇಕೆಂದು ಮನವಿ ಮಾಡಿದ್ದಾರೆ.

SCROLL FOR NEXT