ರಾಜ್ಯ

ಪ್ರವೀಣ್ ನೆಟ್ಟಾರು ಹತ್ಯೆಯಾದ ಬೆಳ್ಳಾರೆಯಲ್ಲಿ ಪರಿಸ್ಥಿತಿ ಹೇಗಿದೆ? ಸದ್ಯದಲ್ಲೆ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ

Sumana Upadhyaya

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರಿನ(Praveen Nettaru) ಹತ್ಯೆ ಖಂಡಿಸಿ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಗುರುವಾರ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ 'ಜನೋತ್ಸವ' ಕಾರ್ಯಕ್ರಮವನ್ನು ರದ್ದುಪಡಿಸಿದೆ.

ಹತ್ಯೆ ಖಂಡಿಸಿ ನಿನ್ನೆ ಸುಳ್ಯ ತಾಲೂಕು, ಪುತ್ತೂರು ಸೇರಿದಂತೆ ಹಲವೆಡೆ ಅಘೋಷಿತ ಬಂದ್ ನಡೆಸಲಾಗಿತ್ತು. ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದವು. ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್ 144 ಜಾರಿ ಮಾಡಿ ಕಟ್ಟೆಚ್ಚರ ವಹಿಸಲಾಗಿತ್ತು. 
ನಿನ್ನೆ ಪ್ರವೀಣ್ ನೆಟ್ಟಾರು ಅಂತ್ಯಕ್ರಿಯೆ ವೇಳೆ ಸ್ಥಳಕ್ಕೆ ಆಗಮಿಸಿದ್ದ ರಾಜಕೀಯ ನಾಯಕರ ವಿರುದ್ಧ ಸ್ಥಳೀಯ ಮುಖಂಡರು, ಬಿಜೆಪಿ ಕಾರ್ಯಕರ್ತರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಮಧ್ಯೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೂ ಹಿಂದೂ ಯುವ ಕಾರ್ಯಕರ್ತರ ಪದೇ ಪದೇ ದಾಳಿ ನಡೆಯುತ್ತಿದ್ದು ಹತ್ಯೆಯಾಗುತ್ತಿದೆ.

ರಾಜ್ಯ ಸರ್ಕಾರ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಲು ವಿಫಲವಾಗಿದೆ ಎಂದು ಆರೋಪಿಸಿ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಇದೀಗ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಹತ್ಯೆ ಖಂಡಿಸಿ‌ ಹಾಗೂ ಸೂಕ್ತ ನ್ಯಾಯಕ್ಕೆ ಆಗ್ರಹಿಸುತ್ತಿರುವ ಕೊಪ್ಪ ಪಟ್ಟಣದ ವಿವಿಧ ಹಿಂದೂ ಸಂಘಟನೆಗಳು ಇಂದು ಬಂದ್​ಗೆ ಕರೆ ನೀಡಿವೆ. ಪಟ್ಟಣದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಹಿಂದೂಪರ ಸಂಘಟನೆಗಳು ಕರೆ ನೀಡಿವೆ. ಅಲ್ಲದೆ ಪ್ರತಿಭಟನೆ ನಡೆಸಲು ಮುಂದಾಗಿರುವ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸಹಜ ಸ್ಥಿತಿಯತ್ತ ಬೆಳ್ಳಾರೆ ಗ್ರಾಮ: ಪ್ರವೀಣ್ ನೆಟ್ಟಾರು ಹತ್ಯೆಯಾದ ಸುಳ್ಯದ ಬೆಳ್ಳಾರೆಯಲ್ಲಿ ಇಂದು ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತಿದ್ದು, ಅಂಗಡಿ-ಮುಂಗಟ್ಟುಗಳು ತೆರೆದಿವೆ. ಬಂದ್ ಕರೆ ಹಿನ್ನೆಲೆಯಲ್ಲಿ ನಿನ್ನೆ ಸಂಪೂರ್ಣ ಬಂದ್ ಆಗಿದ್ದವು. ಇಂದು ಶಾಲೆ-ಕಾಲೇಜುಗಳು ಎಂದಿನಂತೆ ಮುಂದುವರಿದಿದೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. 

ಸಿಎಂ ಸುದ್ದಿಗೋಷ್ಠಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇಂದು ಜೂನ್ 28ಕ್ಕೆ 3 ವರ್ಷವಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಇಂದು ಆಯೋಜಿಸಲಾಗಿದ್ದ ಜನೋತ್ಸವ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ರದ್ದಾಗಿದ್ದು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಿಎಂ ಬೊಮ್ಮಾಯಿ ಸರ್ಕಾರದ ಸಾಧನೆ ವರದಿಯನ್ನು ಸರಳವಾಗಿ ಔಪಚಾರಿಕವಾಗಿ ಬಿಡುಗಡೆ ಮಾಡಲಿದ್ದಾರೆ. ಬಳಿಕ ಸಿಎಂ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

SCROLL FOR NEXT