ರಾಜ್ಯ

ನಾಳೆ ಅಂಜನಾದ್ರಿ ಬೆಟ್ಟಕ್ಕೆ ಸಿಎಂ ಬೊಮ್ಮಾಯಿ ಭೇಟಿ

Lingaraj Badiger

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಸೋಮವಾರ ಬೆಳಿಗ್ಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ದಾವಣಗೆರೆ ಜಿಲ್ಲೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತೆರಳಲಿದ್ದಾರೆ.

ದಾವಣಗೆರೆಯಲ್ಲಿ ಬೆಳಿಗ್ಗೆ ಆಯೋಜಿಸಲಾಗಿರುವ ಸಿದ್ದರಾಮೇಶ್ವರ ರಥ ವಜ್ರಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗಿಯಾಗಲಿದ್ದಾರೆ. ಬಳಿಕ ಕೊಪ್ಪಳ ಜಿಲ್ಲೆಗೆ ತೆರಳಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ, ವೀಕ್ಷಣೆ ನಡೆಸಿ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂಪಾಯಿ ಅನುದಾನವನ್ನು ಸರ್ಕಾರದಿಂದ ನೀಡಲಾಗಿದೆ. ಅಂಜನಾದ್ರಿ ಬೆಟ್ಟದ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ವೀಕ್ಷಿಸಿದ್ದು, ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ಮಧ್ಯಾಹ್ನ ಸಿಎಂ ಕೊಪ್ಪಳ ಜಿಲ್ಲೆಯಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಲಿದ್ದಾರೆ. ಕೊಪ್ಪಳದ ಗವಿಸಿದ್ದೇಶ್ವರ ಮಠದಿಂದ ವಸತಿ ಮತ್ತು ದಾಸೋಹ ನಿಲಯ ನಿರ್ಮಾಣಕ್ಕೆ ಸರ್ಕಾರದಿಂದ ಹತ್ತು ಕೋಟಿ ರೂಪಾಯಿ ನೆರವು ನೀಡಲಾಗಿದೆ.

SCROLL FOR NEXT