ರಾಜ್ಯ

ಧಾರವಾಡ: ಅಗ್ನಿಪಥ್ ಯೋಜನೆ ವಿರುದ್ಧದ ಪ್ರತಿಭಟನೆಯಲ್ಲಿ ಮಾಜಿ ಸೈನಿಕರೊಬ್ಬರ ಪಾತ್ರ ಬೆಳಕಿಗೆ

Nagaraja AB

ಬೆಂಗಳೂರು: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ಹುಬ್ಬಳ್ಳಿ-ಧಾರವಾಡದಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ನಿವೃತ್ತ ಯೋಧರೊಬ್ಬರ ಪಾತ್ರವಿರುವುದು ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಧಾರವಾಡದಲ್ಲಿ ಸೇನಾ ನೇಮಕಾತಿಗಾಗಿ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ ಮಾಜಿ ಸೈನಿಕರೊಬ್ಬರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ 42 ಪ್ರತಿಭಟನಾಕಾರರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಲಾಗಿತ್ತು. 

ಮಾಜಿ ಸೈನಿಕನನ್ನು ಇನ್ನೂ ಪತ್ತೆ ಹಚ್ಚಬೇಕಾಗಿದೆ ಎಂದು ಮೂಲಗಳು ಹೇಳಿವೆ. ಈ ಮಧ್ಯೆ ಅಗ್ನಿಪಥ್ ಯೋಜನೆ ವಿರೋಧಿಸಿ ರಾಜ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವವರು ಯಾವುದೇ ಸರ್ಕಾರಿ ಹುದ್ದೆಗೆ ಅರ್ಹರಲ್ಲ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಸರ್ಕಾರಿ ಹುದ್ದೆಗೆ ಅರ್ಜಿದಾರರ ಪೊಲೀಸ್ ಪರಿಶೀಲನೆ ಕಡ್ಡಾಯ. ಒಂದು ವೇಳೆ ಸರ್ಕಾರಿ ಸೇವೆ ಸೇರ ಬಯಸುವ ವ್ಯಕ್ತಿಯು ಪ್ರತಿಭಟನೆ, ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟ ಮತ್ತಿತರ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದಲ್ಲಿ ಅಂತವರಿಗೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಪರಿಸ್ಥಿತಿ ಶಾಂತಯುತವಾಗಿದೆ. ಬೆಳಗಾವಿಯಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಕಾಂಗ್ರೆಸ್ ಭಾರತ್ ಬಂದ್ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

SCROLL FOR NEXT