ರಾಜ್ಯ

ಹಿಂದೂ 'ಅಶ್ಲೀಲ' ವಿವಾದ: ತಮ್ಮ ಹೇಳಿಕೆಯನ್ನು ಹಿಂಪಡೆದು ವಿಷಾದ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ

Vishwanath S

ಬೆಂಗಳೂರು: ಹಿಂದೂ ಪದ ಪರ್ಷಿಯನ್ ಪದ ಅದು ಅಶ್ಲೀಲ. ಹಿಂದೂ ಪದಕ್ಕೆ ಶಬ್ದಕೋಶದಲ್ಲಿ ಅಶ್ಲೀಲ ಎಂಬ ಅರ್ಥವಿದೆ ಎಂದು ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ಇದೀಗ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದು ವಿಷಾದ ವ್ಯಕ್ತಪಡಿಸಿದ್ದಾರೆ.

ಸತೀಶ್ ಜಾರಕಿಹೊಳಿ ಹೇಳಿಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಇನ್ನು ಬಿಜೆಪಿ ಸೇರಿದಂತೆ ಕಾಂಗ್ರೆಸ್ ನ ಪ್ರಮುಖ ನಾಯಕರೇ ಈ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ನಿನ್ನೆಯವರೆಗೂ ತಮ್ಮ ಹೇಳಿಕೆಗೆ ಬದ್ಧ ಎಂದು ಹೇಳುತ್ತಿದ್ದ ಸತೀಶ್ ಜಾರಕಿಹೊಳಿ ಅವರು ಇದೀಗ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಹಿಂದೂ ಪದದ ಬಗ್ಗೆ ನೀಡಿರುವ ಹೇಳಿಕೆ ಬಗ್ಗೆ ತಂಡ ರಚನೆ ಮಾಡಿ ತನಿಖೆ ಮಾಡುವಂತೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ ಆ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಮತ್ತು ಈ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ವಕೀಲ ದಿಲೀಪ್ ಕುಮಾರ್ ಎಂಬುವರು ಸತೀಶ್ ಜಾರಕಿಹೊಳಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.. ಬೆಂಗಳೂರಿನ ‌8ನೇ ಎಸಿಎಂಎಂ ಕೋರ್ಟ್‌ನಲ್ಲಿ ದಿಲೀಪ್ ಖಾಸಗಿ ದೂರು ದಾಖಲಿಸಿದ್ದಾರೆ.

2022ರ ಅಕ್ಟೋಬರ್ 6ರಂದು ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಇದರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ ಅವರು, ಈ ಹೇಳಿಕೆ ನೀಡಿದ್ದರು. ಇನ್ನು ಸತೀಶ್ ಜಾರಕಿಹೊಳಿಯವರು ಕೂಡಲೇ ಜನರ ಕ್ಷಮೆ ಕೇಳಬೇಕೆಂದು ಬಿಜೆಪಿ ನಾಯಕರು ತೀವ್ರ ಪಟ್ಟು ಹಿಡಿದಿದ್ದು ಇಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು.

SCROLL FOR NEXT