ರಾಜ್ಯ

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಕುರಿತು ಶೀಘ್ರದಲ್ಲೇ ನಿರ್ಧಾರ: ಸಿಎಂ ಬೊಮ್ಮಾಯಿ

Manjula VN

ಹೊಸದುರ್ಗ (ಚಿತ್ರದುರ್ಗ): ಮುರುಘಾ ಮಠ ಮತ್ತು ಎಸ್‌ಜೆಎಂ ಶಿಕ್ಷಣ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡುವ ಕುರಿತು ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಗೆ ಸಲ್ಲಿಸಿರುವ ವರದಿ ಆಧರಿಸಿ ರಾಜ್ಯ ಸರ್ಕಾರ ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ಕೋರಿರುವ ಅರ್ಜಿ ಸರಕಾರಕ್ಕೆ ತಲುಪಿದೆ. ನಿರ್ಧಾರ ತೆಗೆದುಕೊಳ್ಳುವ ಮೊದಲು ಸರ್ಕಾರ ಅನುಸರಿಸಬೇಕಾದ ಕಾರ್ಯವಿಧಾನವಿರುವುದರಿಂದ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇವೆಂದು ಹೇಳಿದರು.

ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕೇಳಿಬಂದಿರುವ ಆರೋಪಗಳು ನ್ಯಾಯಾಲಯದ ಮುಂದಿದೆ. ಪ್ರಕರಣ ನ್ಯಾಯಾಲಯದ ಅಂಗಳದಲ್ಲಿದ್ದು, ಈ ಸಂದರ್ಭದಲ್ಲಿ ಈ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದು ತಿಳಿಸಿದರು.

ಇದೇ ವೇಳೆ ಹಿಂದೂ ಪದ ಕುರಿತು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸತೀಶ್ ಜಾರಕಿಹೊಳಿ ಅವರಿಗೆ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಬಿಜೆಪಿಯ ಜನಸಂಕಲ್ಪ ಯಾತ್ರೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ವಿಧಾನಸಭಾ ಚುನಾವಣೆಗೆ ಮುನ್ನ ಯಾತ್ರೆ ವಿಜಯ ಸಂಕಲ್ಪವಾಗಿ ಬದಲಾಗಲಿದೆ ಎಂದು ಹೇಳಿದರು.

SCROLL FOR NEXT