ಬೆಂಗಳೂರು: ಪಾಲಿಕೆ ಕಂದಾಯ ಅಧಿಕಾರಿಗಳ ಒತ್ತಡವನ್ನು ಕಡಿಮೆ ಮಾಡಲು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ನೇಮಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಾರ್ಮಿಕರ ಸಂಘವು ಭಾರತ ಚುನಾವಣಾ ಆಯೋಗಕ್ಕೆ (ಇಸಿಐ) ಮನವಿ ಮಾಡಿದೆ.
ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ಅಮೃತ್ ರಾಜ್, ಚುನಾವಣೆ ಪ್ರಕ್ರಿಯೆ ಆರಂಭವಾದಾಗಿನಿಂದಲೂ ಅಧಿಕಾರಿಗಳ ಮೇಲೆ ಹೊರೆ ಹೆಚ್ಚಿದೆ. ಅಲ್ಲದೇ ಅಧಿಕಾರಿಗಳಿಗೆ ಕಡಿಮೆ ವೇತನ ನೀಡಲಾಗುತ್ತಿದೆ ಎಂದು ಹೇಳಿದರು.
ಬಿಬಿಎಂಪಿ ಅಧಿಕಾರಿಗಳ ಸಹಿ ನಕಲಿ ಮಾಡಲಾಗಿದ್ದು, ಬಿಬಿಎಂಪಿ ನೀಡಿದ ದೂರಿನ ಆಧಾರದ ಮೇಲೆ ಸಾರ್ವಜನಿಕ ಕಾಯಿದೆಯ ಪ್ರಕಾರ ಕಂದಾಯ ಅಧಿಕಾರಿಗಳನ್ನು ಬಂಧಿಸುವುದು ಸೂಕ್ತವಲ್ಲ. ಮತದಾರರ ಮಾಹಿತಿ ಕಳವು ಪ್ರಕರಣ ಸಂಬಂಧ ಚಿಲುಮೆ ಎನ್‌ಜಿಒ ವಿರುದ್ಧ ಕ್ರಮ ಕೈಗೊಳ್ಳಬೇಕು. ಪೊಲೀಸರು ಮತ್ತು ಮುಖ್ಯ ಚುನಾವಣಾಧಿಕಾರಿಯಿಂದ ತನಿಖೆ ನಡೆಸಲು ಬಿಬಿಎಂಪಿ ಅಧಿಕಾರಿಗಳು ಸಿದ್ಧರಾಗಿದ್ದಾರೆ. ಬಿಬಿಎಂಪಿ ಕಂದಾಯ ಅಧಿಕಾರಿಗಳನ್ನು ಮಾನಸಿಕವಾಗಿ ಹಿಂಸಿಸಬಾರದು ಎಂದು ತಿಳಿಸಿದರು.
ಸಾರ್ವಜನಿಕರ ಪ್ರಾತಿನಿಧ್ಯ ಕಾಯ್ದೆ ಪ್ರಕಾರ ಬಿಬಿಎಂಪಿ ದೂರು ದಾಖಲಿಸುವಂತಿಲ್ಲ. ಮುಖ್ಯ ಚುನಾವಣಾಧಿಕಾರಿಯೇ ದೂರು ದಾಖಲಿಸಬೇಕು. ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆ ನಡೆಯುತ್ತಿಲ್ಲ ಎಂದು ಹಿರಿಯ ವಕೀಲ ಶ್ರೀನಿವಾಸ್ ಆರೋಪಿಸಿದ್ದಾರೆ.
''ಚಿಲುಮೆ ಸಂಸ್ಥೆಯ ಬೂತ್ ಮಟ್ಟದ ಅಧಿಕಾರಿಗಳು ನಕಲಿ ಗುರುತಿನ ಚೀಟಿ ತಯಾರಿಸಿ ಅಕ್ರಮ ಎಸಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಬಿಬಿಎಂಪಿ ಕಂದಾಯ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸುತ್ತಿದೆ,'' ಎಂದು ವಕೀಲರು ತಿಳಿಸಿದ್ದಾರೆ.