ರಾಜ್ಯ

ಮತದಾರರ ಪಟ್ಟಿಯಿಂದ ನಿರ್ದಿಷ್ಟ ಸಮುದಾಯದವರ ಹೆಸರು ತೆರವು: ರೇವಣ್ಣ ಗಂಭೀರ ಆರೋಪ 

Srinivas Rao BV

ಹಾಸನ: ಮತದಾರರ ಪಟ್ಟಿಯಿಂದ ನಿರ್ದಿಷ್ಟ ಸಮುದಾಯದವರ ಹೆಸರುಗಳನ್ನು ಮತದಾರರ ಪಟ್ಟಿಯ ವಿಶೇಷ ಸಾರಾಂಶ ಪರಿಷ್ಕರಣೆಯ ಹೆಸರಿನಲ್ಲಿ ತೆಗೆದುಹಾಕಲಾಗಿದೆ ಎಂದು ಮಾಜಿ ಸಚಿವ ರೇವಣ್ಣ ಆರೋಪಿಸಿದ್ದಾರೆ.
 
ಜಿಲ್ಲೆಯಲ್ಲಿ ಈ ರೀತಿಯ ಘಟನೆ ನಡೆದಿದೆ ಎಂದು ಪತ್ರಕರ್ತರೊಂದಿಗೆ ಮಾತನಾಡಿರುವ ಅವರು ಹೇಳಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆ ಕರ್ತವ್ಯ ನಿರ್ವಹಿಸುತ್ತಿರುವ ಬ್ಲಾಕ್ ಮಟ್ಟದ ಅಧಿಕಾರಿಗಳು ಚುನಾವಣಾ ಆಯೋಗದ ನಿರ್ದೇಶನದಂತೆ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ರೇವಣ್ಣ ಆರೋಪಿಸಿದ್ದಾರೆ. ಮನೆ ಮನೆಗಳಿಗೆ ತೆರಳಿ ಮಾಹಿತಿಯನ್ನು ಕಲೆಹಾಕುವುದಕ್ಕೆ ಬ್ಲಾಕ್ ಮಟ್ಟದ ಅಧಿಕಾರಿಗಳು ಸಿದ್ಧರಿಲ್ಲ.

2023 ರ ವಿಧಾನಸಭಾ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳಾಗಿರುವವರ ಪೈಕಿ ಒಬ್ಬರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಉಡುಗೊರೆಗಳನ್ನು ನೀಡಿ ವೋಟರ್ ಐಡಿಗಳನ್ನು ಸಂಗ್ರಹಿಸಿದ್ದಾರೆ. ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಹಾಸನ ತಾಲೂಕಿನಲ್ಲಿ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಹೆಸರುಗಳನ್ನು ಡಿಲೀಟ್ ಮಾಡಿದ್ದಾರೆ ಎಂದು ರೇವಣ್ಣ ಆರೋಪಿಸಿದ್ದಾರೆ. ತಮ್ಮ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ರೇವಣ್ಣ ಹೇಳಿದ್ದಾರೆ. 

ಇದೇ ವೇಳೆ ಪಕ್ಷದ ವಿಷಯವಾಗಿಯೂ ಮಾತನಾಡಿರುವ ರೇವಣ್ಣ, ಅರಸಿಕೆರೆ ಶಾಸಕ ಶಿವಲಿಂಗೇಗೌಡ ಪಕ್ಷ ಬಿಡುವುದಿಲ್ಲ ಎಂದು ಹೇಳಿದ್ದಾರೆ. 2023 ರ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳನ್ನು ಪಕ್ಷದ ಹಿರಿಯ ನಾಯಕರು ತೀರ್ಮಾನಿಸಲಿದ್ದಾರೆ ಎಂದು ರೇವಣ್ಣ ತಿಳಿಸಿದ್ದಾರೆ.

SCROLL FOR NEXT