ರಾಜ್ಯ

ಎಸ್​ಸಿ, ಎಸ್​ಟಿಗೆ ಬಂಪರ್ ಗಿಫ್ಟ್: ಮೀಸಲಾತಿ ಪ್ರಮಾಣ ಹೆಚ್ಚಿಸಲು ಸರ್ವಪಕ್ಷ ಸಭೆ ತೀರ್ಮಾನ

Lingaraj Badiger

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(SC-ST)ಕ್ಕೆ ಬೊಮ್ಮಾಯಿ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು, ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಶುಕ್ರವಾರ ನಡೆದ ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಇಂದು ಸರ್ವಪಕ್ಷ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಎಸ್​ಸಿ, ಎಸ್​ಟಿಗೆ ಸೇರಿದವರಿಗೆ ಹೆಚ್ಚಿನ ಅವಕಾಶ ನೀಡಲು ಅನುಕೂಲವಾಗುವಂತೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಎಸ್​ಸಿ ವರ್ಗದ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ. 15ರಿಂದ ಶೇ. 17ಕ್ಕೆ ಹಾಗೂ ಎಸ್​ಟಿ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ. 3ರಿಂದ 7ಕ್ಕೆ ಹೆಚ್ಚಳ ಮಾಡಲಾಗುವುದು. ಸರ್ವಪಕ್ಷ ಸಭೆಯ ನಿರ್ಣಯವನ್ನು ಸಚಿವ ಸಂಪುಟದಲ್ಲಿ ಇರಿಸಿ ಅಂಗೀಕಾರ ಪಡೆದುಕೊಂಡ ನಂತರ ಸರ್ಕಾರಿ ಆದೇಶ ಹೊರಡಿಸಲಾಗುವುದು. ಮೀಸಲಾತಿ ಪ್ರಮಾಣ ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಬೊಮ್ಮಾಯಿ ಹೇಳಿದರು.

ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವ ಬಗ್ಗೆ ಸಂವಿಧಾನವು ಪ್ರಸ್ತಾಪಿಸಿದೆ. ಅದರ ಆಶಯದಂತೆ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂಬುದು ನಮ್ಮ ನಿರ್ಧಾರ. ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್​ ಸಮಿತಿ ಅಧ್ಯಯನ ಮಾಡಿ, ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಸರ್ವಪಕ್ಷ ಸಭೆಯಲ್ಲಿ ವರದಿ ಅನುಷ್ಠಾನ ಸಂಬಂಧ ಚರ್ಚೆ ನಡೆಸಿದೆವು ಎಂದು ಸಿಎಂ ತಿಳಿಸಿದರು.

SCROLL FOR NEXT