ರಾಜ್ಯ

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಕೋಟಿ ರೂ. ಬಂಡವಾಳ ನಿರೀಕ್ಷೆ: ಸಚಿವ ನಿರಾಣಿ

Manjula VN

ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶ (ಜಿಮ್) 2022 ನವೆಂಬರ್ 2 ರಿಂದ 4 ರವರೆಗೆ ನಡೆಯಲಿದ್ದು, ಈ ಸಮಾವೇಶದಿಂದ ರಾಜ್ಯ ಸರ್ಕಾರವು 5 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆಯನ್ನು ನಿರೀಕ್ಷಿಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಗುರುವಾರ ಹೇಳಿದರು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾವೇಶಕ್ಕೆ ಪ್ರಧಾನಿ ಮೋದಿಯವರು ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ. ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಭಗವಂತ ಖೂಬಾ, ಸ್ಮೃತಿ ಇರಾನಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಮಾಹಿತಿ ನೀಡಿದರು. 

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆಯಿದ್ದು, ರೂ.5 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗಲಿದೆ. ಈ ಮೂಲಕ ಕನಿಷ್ಟ 5 ಲಕ್ಷ ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ಜಾಗತಿಕ ಹೂಡಿಕೆದಾರರ ಸಮಾವೇಶದ ಸಂದರ್ಭದಲ್ಲಿ ಭೂ ಹಂಚಿಕೆಗೆ ಅನುಕೂಲವಾಗುವಂತೆ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರೆ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸ್ವಾಧೀನಕ್ಕೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. 

ನಮ್ಮ ಸರ್ಕಾರದ ಹಲವು ಸುಧಾರಣಾ ಕ್ರಮಗಳ ಪರಿಣಾವಾಗಿ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. ನೂತನ ಕೈಗಾರಿಕಾ ನೀತಿ ಹಾಗೂ ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮದಲ್ಲಿನ ತಿದ್ದುಪಡಿಗಳಿಂದ ರಾಜ್ಯ ಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ ಅತ್ಯುತ್ತಮ ಸ್ಥಾನ ಪಡೆದುಕೊಂಡಿದೆ ಎಂದರು. 

SCROLL FOR NEXT